ADVERTISEMENT

ಈ ವರ್ಷ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬೈಸಿಕಲ್: ಸಿಎಂ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 16 ಮೇ 2022, 11:27 IST
Last Updated 16 ಮೇ 2022, 11:27 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ತುಮಕೂರು: ಈ ವರ್ಷದಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಪ್ರಕಟಿಸಿದರು.

ನಗರದ ಎಂಪ್ರೆಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಉಚಿತವಾಗಿ ಪಠ್ಯ ಪುಸ್ತಕ ವಿತರಣೆ, ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು.

ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳಿಗೆ ಸಾಕಷ್ಟು ದೂರ ನಡೆದುಕೊಂಡು ಹೋಗಬೇಕಿದೆ. ಹಿಂದಿನಂತೆ ಸೈಕಲ್ ಕೊಟ್ಟರೆ ಸಕಾಲಕ್ಕೆ ಹೋಗಲು ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿನಿಯೊಬ್ಬರ ಪ್ರಶ್ನೆಗೆ ಮುಖ್ಯಮಂತ್ರಿ ಈ ಭರವಸೆ ನೀಡಿದರು. ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ನಿಂದಾಗಿ ಶಾಲೆಗಳು ನಡೆದಿಲ್ಲ. ಹಾಗಾಗಿ ಸೈಕಲ್ ಕೊಡಲು ಸಾಧ್ಯವಾಗಿಲ್ಲ. ಈ ವರ್ಷ ವ್ಯವಸ್ಥೆ ಮಾಡಲಾಗುವುದು ಎಂದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪೂರಕ ಬಜೆಟ್‌ನಲ್ಲಿ ಇದಕ್ಕೆ ಹಣ ಒದಗಿಸಲಾಗುವುದು’ ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಸಾವಧಾನದಿಂದಲೇ ಮುಖ್ಯಮಂತ್ರಿ ಉತ್ತರಿಸಿದರು. ಕಳೆದ ಎಂಟತ್ತು ವರ್ಷಗಳಿಂದ ಶಾಲಾ ಕೊಠಡಿಗಳು ದುರಸ್ತಿಯಾಗಿಲ್ಲ. ಸಾಕಷ್ಟು ಕಡೆಗಳಲ್ಲಿ ಸೋರುತ್ತಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ₹1 ಸಾವಿರ ಕೋಟಿ ಮೊತ್ತದಲ್ಲಿ 6,500 ಕೊಠಡಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ವರ್ಷದ ಅಂತ್ಯದ ಒಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಪ್ರವಾಸ ಭಾಗ್ಯ: ಶಾಲಾ ಮಕ್ಕಳ ಜಿಲ್ಲಾ ದರ್ಶನ ಹಾಗೂ ಕರ್ನಾಟಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಹೆಣ್ಣು ಮಕ್ಕಳಿಗೆ ಶುಚಿ ಪ್ಯಾಡ್ ನೀಡಲಾಗುವುದು. ಸರ್ಕಾರಿ ಶಾಲೆಗಳಲ್ಲೂ ಎಸ್‌ಡಿಎಂಸಿ ಮೂಲಕ ಗುರುತಿನ ಕಾರ್ಡ್ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದರು.

ಕ್ರೀಡಾ ಸಾಮಗ್ರಿ: ಶಾಲೆಗಳಲ್ಲಿ ಕ್ರೀಡಾ ಸಾಮಗ್ರಿಗಳ ಕೊರತೆ ಬಗ್ಗೆ ವಿದ್ಯಾರ್ಥಿ ಪ್ರಶ್ನೆಗೆ ಉತ್ತರಿಸಿ, ‘ಕ್ರೀಡಾ ಪರಿಕರ ಕೊಳ್ಳಲು ಹಿಂದಿನ ವರ್ಷ ₹5 ಕೋಟಿ ನೀಡಲಾಗಿತ್ತು. ಈ ವರ್ಷ ₹10 ಕೋಟಿ ಕೊಡಲಾಗುವುದು. ಮಧ್ಯಾಹ್ನದ ಬಿಸಿ ಊಟದಲ್ಲಿ ಪೌಷ್ಟಿಕಾಂಶದ ಪ್ರಮಾಣ ಹೆಚ್ಚಿಸಲು ಸಿರಿ ಧಾನ್ಯಗಳ ಆಹಾರ ನೀಡಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.

‘ಶೈಕ್ಷಣಿಕೆ ಚಟುವಟಿಕೆಗೆ ಚಾಲನೆ ನೀಡಲು ಮುಖ್ಯಮಂತ್ರಿ ಬರಬೇಕಿತ್ತೇ ಎಂದು ಕೆಲವರು ಪ್ರಶ್ನಿಸಿದ್ದಾರೆ. ಹೌದು, ನಾನು ಬರಬೇಕಿತ್ತು. ನಮ್ಮ ಎಲ್ಲಾ ರೀತಿಯ ಬೆಳವಣಿಗೆ ನಿಂತಿರುವುದು ಶಿಕ್ಷಣದ ಪ್ರಗತಿ ಮೇಲೆ. ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಿಂತ ಪುಣ್ಯದ ಕೆಲ ಬೇರೇನಿದೆ’ ಎಂದು ಟೀಕಾಕಾರರನ್ನು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.