ಬೆಂಗಳೂರು: ‘ಬೀದರ್ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಕಮಲಾನಗರ, ಹುಲ್ಸೂರು ಮತ್ತು ಚಿಟಗುಪ್ಪ ತಾಲ್ಲೂಕುಗಳಲ್ಲಿ ಸಿವಿಲ್ ಕೋರ್ಟ್ ಸ್ಥಾಪಿಸಬೇಕು ಎಂಬ ಅರ್ಜಿದಾರರ ಮನವಿಯನ್ನು 10 ವಾರಗಳಲ್ಲಿ ಕಾನೂನು ಪ್ರಕಾರ ಪರಿಗಣಿಸಿ’ ಎಂದು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಸಂಬಂಧ ಬೀದರ್ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಗುರುನಾಥ್ ವಡ್ಡೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿ ಅರ್ಜಿ ವಿಲೇವಾರಿ ಮಾಡಿತು.
‘ತಾಲ್ಲೂಕುಗಳ ಕೇಂದ್ರ ಸ್ಥಳಗಳನ್ನು ನಿಗದಿಪಡಿಸುವುದು, ನ್ಯಾಯಾಲಯಗಳನ್ನು ಸ್ಥಾಪಿಸುವುದು ಸರ್ಕಾರದ ನೀತಿ ನಿರ್ಧಾರದ ಭಾಗವಾಗಿದೆ. ಈ ನಿಟ್ಟಿನಲ್ಲಿ ನ್ಯಾಯಾಲಯ ಯಾವುದೇ ನಿರ್ದೇಶನ ನೀಡಲಾಗದು. ಹಾಗಾಗಿ, ಅರ್ಜಿ ವಜಾಗೊಳಿಸಬೇಕಾಗುತ್ತದೆ’ ಎಂದು ಹೇಳಿತು.
ಇದಕ್ಕೆ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್, ‘ಈ ವಿಚಾರವಾಗಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಗಳು ಪರಿಗಣಿಸುವಂತೆ ನ್ಯಾಯಪೀಠ ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರು 2023ರ ಅಕ್ಟೋಬರ್ 4ರಂದು ಸಲ್ಲಿಸಿರುವ ಮನವಿಯನ್ನು ಕಾನೂನು ರೀತ್ಯಾ 10 ವಾರಗಳಲ್ಲಿ ಪರಿಗಣಿಸಬೇಕು’ ಎಂದು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.