ADVERTISEMENT

ಜಯಮಾಲಾ ರಾಜೀನಾಮೆಗೆ ಬಿಜೆಪಿ ಆಗ್ರಹ

ವೇಶ್ಯಾವಾಟಿಕೆಗೆ ನಾಲ್ವರು ಹೆಣ್ಣು ಮಕ್ಕಳನ್ನು ದೂಡಿದ ಪ್ರಕರಣ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2019, 20:25 IST
Last Updated 1 ಏಪ್ರಿಲ್ 2019, 20:25 IST

ಬೆಂಗಳೂರು: ಚಿಕ್ಕಬಳ್ಳಾಪುರದ ಮಕ್ಕಳ ಆಶ್ರಯ ಕೇಂದ್ರದ ನಾಲ್ವರು ಹೆಣ್ಣು ಮಕ್ಕಳನ್ನು ಭದ್ರತಾ ಸಿಬ್ಬಂದಿಯೇ ವೇಶ್ಯಾವಾಟಿಕೆಗೆ ದೂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ, ‘ಇದಕ್ಕೆ ಸರ್ಕಾರ ನೇರ ಹೊಣೆ. ಆಶ್ರಯ ಕೇಂದ್ರಗಳ ಭದ್ರತೆ ಹಾಗೂ ಸುರಕ್ಷತೆಗೆ ಗಮನ ಕೊಡದೆ ನಿರ್ಲಕ್ಷ್ಯ ಮಾಡಿರುವುದರಿಂದ ಈ ಘಟನೆ ನಡೆದಿದೆ’ ಎಂದು ದೂರಿದರು.

‘ಈ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಬಾಲಮಂದಿರಗಳ ಲೆಕ್ಕಪತ್ರ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸ್ಪಷ್ಟ ಸೂಚನೆ ನೀಡಿದ್ದರೂ ಜಯಮಾಲಾ ಇದೂವರೆಗೂ ವರದಿ ಸಲ್ಲಿಸಿಲ್ಲ. ಜಯಮಾಲಾ ಅವರು ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಚುನಾವಣಾ ಕೆಲಸಗಳಿಗೆ ಸಮಯ ನೀಡುವ ಸಚಿವರು ಬಾಲಮಂದಿರಗಳಲ್ಲಿನ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ’ ಎಂದು ಕಿಡಿಕಾರಿದರು.

ADVERTISEMENT

‘ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಜಾತಿಯ ಬಗ್ಗೆ ಸಂಸದ ಎಲ್‌.ಆರ್‌.ಶಿವರಾಮೇಗೌಡ ಮಾತನಾಡಿದ್ದಾರೆ. ತಮ್ಮದೇ ಮೈತ್ರಿ ಪಕ್ಷವಾದ ಕಾಂಗ್ರೆಸ್‌ ನಾಯಕರ ಬಗ್ಗೆಯೂ ಇದೇ ರೀತಿ ಮಾತನಾಡುತ್ತಾರೆಯೇ. ಮಹಿಳೆಯರ ಬಗ್ಗೆ ಇದೇ ರೀತಿ ಮಾತನಾಡುವುದನ್ನು ಮುಂದುವರಿಸಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಿದೆ’ ಎಂದು ಎಚ್ಚರಿಸಿದರು.

ಬಿಜೆಪಿ ಸಹವಕ್ತಾರೆ ಮಂಜುಳಾ ಮಾತನಾಡಿ, ‘ಶಿವರಾಮೇಗೌಡರು ಸುಮಲತಾ ಜಾತಿ ಪ್ರಸ್ತಾಪ ಮಾಡುವ ಮೂಲಕ ಅವಮಾನ ಮಾಡಿದ್ದಾರೆ. ಹೀಗಾಗಿ ಶಿವರಾಮೇಗೌಡರ ವಿರುದ್ಧ ಚುನಾವಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.