ಬೆಂಗಳೂರು: ‘ವಕ್ಫ್ ಹಗರಣವನ್ನು ರಾಜ್ಯ ಸರ್ಕಾರ 15 ದಿನಗಳಲ್ಲಿ ಸಿಬಿಐಗೆ ಒಪ್ಪಿಸಬೇಕು. ಇಲ್ಲದಿದ್ದರೆ ಬಿಜೆಪಿ ರಾಜ್ಯದಾದ್ಯಂತ ಹೋರಾಟ ನಡೆಸಲಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು.
ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇದು ₹2 ಲಕ್ಷ ಕೋಟಿಯ ಹಗರಣ. 27,000 ಎಕರೆ ಭೂಕಬಳಿಕೆಯಾಗಿದೆ. ಈ ಬಗ್ಗೆ ಅನ್ವರ್ ಮಾಣಿಪ್ಪಾಡಿ ಅವರು 7,000 ಪುಟಗಳ ವರದಿ ಸಲ್ಲಿಸಿದ್ದರು. ಕಾಂಗ್ರೆಸ್ ಸರ್ಕಾರ ಸದನದಲ್ಲಿ ವರದಿ ಮಂಡನೆಗೆ ಮೀನಮೇಷ ಎಣಿಸಿತ್ತು. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸದನದಲ್ಲೇ ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಸಿಬಿಐಗೆ ಒಪ್ಪಿಸದಿದ್ದರೆ ಜಮೀರ್ ಅವರನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಆಗ್ರಹಿಸಿದರು.
ಅನ್ವರ್ ಮಾಣಿಪ್ಪಾಡಿ, ‘ರಾಜ್ಯದೆಲ್ಲೆಡೆ ಕಬಳಿಕೆಯಾಗಿರುವ ವಕ್ಫ್ ಆಸ್ತಿ ಬಗ್ಗೆ ತನಿಖೆ ನಡೆಸಿ 2012ರಲ್ಲಿ ರಾಜ್ಯ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗಿತ್ತು. ಸದನದಲ್ಲಿ ವರದಿ ಮಂಡನೆ ಸಂದರ್ಭ ಬಿಜೆಪಿ ಅಧಿಕಾರ ಕಳೆದುಕೊಂಡಿತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ವರದಿ ಜಾರಿಗೆ ಮುಂದಾಗಲಿಲ್ಲ. ಮೈತ್ರಿ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.