ADVERTISEMENT

ವಿಧಾನ ಪರಿಷತ್‌ ಉಪಚುನಾವಣೆ: RSS ಮೂಲದ ಕಿಶೋರ್‌ಕುಮಾರ್‌ಗೆ ಬಿಜೆಪಿ ಟಿಕೆಟ್ ಘೋಷಣೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 13:04 IST
Last Updated 1 ಅಕ್ಟೋಬರ್ 2024, 13:04 IST
<div class="paragraphs"><p>ಕಿಶೋರ್‌ಕುಮಾರ್</p></div>

ಕಿಶೋರ್‌ಕುಮಾರ್

   

ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಆರ್‌ಎಸ್‌ಎಸ್ ಮೂಲದ ಕಿಶೋರ್‌ಕುಮಾರ್ ಪುತ್ತೂರು ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಉಡುಪಿ ಜಿಲ್ಲೆಯಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದಯಕುಮಾರ್ ಶೆಟ್ಟಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ಬಂಟ ಮತ್ತು ಬಿಲ್ಲವ ಸಮುದಾಯದ ಪ್ರಬಲವಾಗಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಸಮುದಾಯಗಳ ಅಭ್ಯರ್ಥಿಗೆ, ಬಿಜೆಪಿ ಹೈಕಮಾಂಡ್ ಮಣೆ ಹಾಕಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಹಿಂದುಳಿದ ಸವಿತಾ ಸಮಾಜದ (ಒಬಿಸಿ) ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ.

ADVERTISEMENT

ಕಿಶೋರ್ ಕುಮಾರ್ ಆರ್‌ಎಸ್‌ಎಸ್ ತರಬೇತುದಾರರಾಗಿ, ಎಬಿವಿಪಿ ಕಾರ್ಯಕರ್ತರಾಗಿ ಕೆಲಸ ಮಾಡಿದವರು. ಬಜರಂಗದಳದ ಮಂಗಳೂರು ವಿಭಾಗ ಸಹ ಸಂಚಾಲಕರಾಗಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅವರು ಪ್ರಸ್ತುತ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕ್ಷೇತ್ರವನ್ನು ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸಿದ್ದರು. ಉಡುಪಿ– ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಅ.21ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.