ADVERTISEMENT

ಅಪಾರ್ಟ್‌ಮೆಂಟ್‌ ವಾಸಿಗಳಿಗೆ ಡಿಕೆಶಿ ಬೆದರಿಕೆ: ಬಿಜೆಪಿ ದೂರು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 15:38 IST
Last Updated 18 ಏಪ್ರಿಲ್ 2024, 15:38 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕಾಂಗ್ರೆಸ್‌ಗೆ ಮತ ಹಾಕದಿದ್ದರೆ ಯಾವುದೇ ಸೌಲಭ್ಯ ಕೊಡುವುದಿಲ್ಲ ಎಂದು ಅಪಾರ್ಟ್‌ಮೆಂಟ್‌ ವಾಸಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪ್ರೆಸ್ಟೀಜ್‌ ಫಾಲ್ಕನ್‌ ಮತ್ತು ಇತರ ಅಪಾರ್ಟ್‌ಮೆಂಟ್‌ಗಳಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರಿಗೆ ಮತ ನೀಡಿದರೆ ಸಿ.ಎ ನಿವೇಶನ ಸೇರಿ ಎಲ್ಲ ರೀತಿಯ ಸೌಲಭ್ಯ ನೀಡುತ್ತೇವೆ. ಇಲ್ಲವಾದರೆ ಸೌಲಭ್ಯ ಸಿಗುವುದಿಲ್ಲ ಎಂದು ನೇರವಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಲಾಭ ಪಡೆಯುವ ದುರುದ್ದೇಶದಿಂದ ಈ ರೀತಿ ಬೆದರಿಕೆ ಹಾಕುತ್ತಿದ್ದಾರೆ. ಆದ್ದರಿಂದ ಸ್ಟಾರ್‌ ಪ್ರಚಾರಕ ಪಟ್ಟಿಯಿಂದ ಡಿ.ಕೆ.ಶಿವಕುಮಾರ್ ಅವರನ್ನು ತೆಗೆಯುವಂತೆ ಸೂಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕುಣಿಗಲ್‌ ತಾಲ್ಲೂಕಿನ ಚಿಕ್ಕ ಅರ್ಜೇನಹಳ್ಳಿ ಗ್ರಾಮದ ಪ್ರೇಮ್‌ ಕುಮಾರ್ ಅವರ ತೋಟಕ್ಕೆ ರಾಜಕೀಯ ವೈಷಮ್ಯದ ಕಾರಣಕ್ಕೆ ಬೆಂಕಿ ಹಚ್ಚಲಾಗಿದೆ. ಈ ಘಟನೆಗೆ ಕಾರಣಕರ್ತರಾದ ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಶ್ವತ್ಥನಾರಾಯಣ ಒತ್ತಾಯಿಸಿದರು.

ಪ್ರಿಯಾಂಕ್‌ ಖರ್ಗೆ ವಿರುದ್ಧವೂ ದೂರು:

ಕಲಬುರ್ಗಿಯಲ್ಲಿ₹39 ಕೋಟಿ ವೆಚ್ಚದಲ್ಲಿ ಅಗ್ರಿಕಲ್ಚರ್‌ ಹಬ್‌ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡುವ ಮೂಲಕ ಸಚಿವ ಪ್ರಿಯಾಂಕ್‌ ಖರ್ಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಒತ್ತಾಯಿಸಿದೆ.


ಮನವಿ ಸಲ್ಲಿಸುವ ನಿಯೋಗದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ್, ರಾಜ್ಯ ವಕ್ತಾರ ಮೋಹನ್ ವಿಶ್ವ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್, ಸದಸ್ಯ ಯಶವಂತ್ ಮತ್ತು ಪಕ್ಷದ ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.