ADVERTISEMENT

ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ: ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಬಂಧನ

​ಪ್ರಜಾವಾಣಿ ವಾರ್ತೆ
Published 23 ಜುಲೈ 2019, 12:33 IST
Last Updated 23 ಜುಲೈ 2019, 12:33 IST
ಪ್ರತಿಭಟನೆ ನಡೆಸಿದ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಪ್ರತಿಭಟನೆ ನಡೆಸಿದ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.   

ಬೆಂಗಳೂರು: ನಗರದ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ನಿತೇಶ್ ಅಪಾರ್ಟ್‌ಮೆಂಟ್‌ ಎದುರು ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ಆಗಿದ್ದು, ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಸಂಬಂಧ ನಗರ ಪೊಲೀಸ್ ಕಮಿಷನರ್ ಅಲೋಕ್‌ಕುಮಾರ್ ಆದೇಶ ಹೊರಡಿಸಿದ್ದು, ಮಂಗಳವಾರ (ಜುಲೈ 23) ಸಂಜೆ 6 ಗಂಟೆಯಿಂದ ಗುರುವಾರ ಸಂಜೆಯವರೆಗೂ (ಜುಲೈ 25) ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ವಿಧಾನಸೌಧ ಸುತ್ತಮುತ್ತ ಹಾಗೂ ನಗರದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಅವರ ಅನುಯಾಯಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಆ ರೀತಿಯಾದರೆ ಪರಸ್ಪರ ಘರ್ಷಣೆ ಉಂಟಾಗಲಿದ್ದು, ಸಾರ್ವಜನಿಕರಿಗೆ ತೊಂದರೆ ಆಗಲಿದೆ. ಶಾಂತಿ ಕಾಪಾಡುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ADVERTISEMENT

ಬಿಜೆಪಿ–ಕಾಂಗ್ರೆಸ್ ಜಟಾಪಟಿ

ನಗರದ ರೇಸ್‌ಕೋರ್ಸ್‌ ರಸ್ತೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರರ ವಿರುದ್ಧ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ಕೈ ಮೀರಿದ ಹಿನ್ನೆಲೆಯಲ್ಲಿ ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರನ್ನು ಬಂಧಿಸಿ, ಬಸ್‌ಗಳಲ್ಲಿ ದೂರಕ್ಕೆ ಕರೆದೊಯ್ದರು.

ಪಕ್ಷೇತರ ಶಾಸಕರಾದ ಆರ್. ಶಂಕರ್ ಮತ್ತು ಎಚ್. ನಾಗೇಶ್ ಅವರು ನೆಲೆಸಿರುವ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿತೇಶ್ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಪರಸ್ಪರರ ವಿರುದ್ಧ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಯಲ್ಲಿ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ನಗರದಾದ್ಯಂತ ಇವುಗಳಿಗೆ ನಿಷೇಧ

* ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ

* ಮೆರವಣಿಗೆ, ಪ್ರತಿಭಟನೆ, ಧರಣಿ ಮತ್ತು ಸಭೆ ನಡೆಸುವಂತಿಲ್ಲ

* ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಸೇರಿದಂತೆ ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ.

* ಯಾವುದೇ ಸ್ಫೋಟಕ ವಸ್ತುಗಳನ್ನು ಸಾಗಿಸುವಂತಿಲ್ಲ. ಇಟ್ಟುಕೊಳ್ಳುವಂತಿಲ್ಲ.

* ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವಂತಿಲ್ಲ. ಪ್ರಚೋದನಕಾರಿಯಾದ ಬಹಿರಂಗ ಘೋಷಣೆ ಕೂಗುವಂತಿಲ್ಲ. ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಬಿಡಿಸುವುದನ್ನು ನಿಷೇಧಿಸಲಾಗಿದೆ.

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.