ಬೆಂಗಳೂರು: ರಾಜ್ಯಸಭೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರು ಹಾಗೂ ವಿಧಾನ ಪರಿಷತ್‌ಗೆ ಶಾಸಕ ಬಿ.ಎಸ್. ಯಡಿಯೂರಪ್ಪ ಮಗ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಇಪ್ಪತ್ತು ಸಂಭ್ಯಾವರ ಹೆಸರುಗಳನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸು ಮಾಡಲು ಶನಿವಾರ ನಡೆದ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಾಗೂ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ರಾಜ್ಯದಿಂದ ನಡೆಯುವ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಶಿಫಾರಸು ಕಳುಹಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯಸಭೆಯ ಎರಡು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಒಂದು ಸ್ಥಾನ ನಿರ್ಮಲಾ ಅವರಿಗೆ ಮೀಸಲಿಡಲಾಗಿದೆ. ಎರಡನೇ ಸ್ಥಾನಕ್ಕೆ ಹಾಲಿ ಸದಸ್ಯ ಕೆ.ಸಿ. ರಾಮಮೂರ್ತಿ ಸೇರಿದಂತೆ ನಾಲ್ವರ ಹೆಸರುಗಳನ್ನು ಶಿಫಾರಸು ಮಾಡಲು ನಿರ್ಧರಿಸಲಾಗಿದೆ. ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ವಿವಿಧ ಸಮುದಾಯದ ತಲಾ ಐವರ ಹೆಸರನ್ನು ಶಿಫಾರಸು ಮಾಡುವ ನಿರ್ಧಾರವನ್ನು ಪ್ರಮುಖರ ಸಮಿತಿ ಕೈಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.