ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣವನ್ನು ಖಂಡಿಸಿ ಆ.3 ರಿಂದ ನಡೆಸುವ ಪಾದಯಾತ್ರೆಯನ್ನು ಕಾಂಗ್ರೆಸ್ ಸರ್ಕಾರದ ಎಲ್ಲ ಅಕ್ರಮಗಳು ಮತ್ತು ಭ್ರಷ್ಟಾಚಾರ ವಿರುದ್ಧದ ಜನಾಂದೋಲನವಾಗಿ ರೂಪಿಸಲು ಬಿಜೆಪಿ–ಜೆಡಿಎಸ್ ತೀರ್ಮಾನಿಸಿವೆ.
ಎರಡೂ ಪಕ್ಷಗಳ ಸಮನ್ವಯ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಎರಡೂ ಪಕ್ಷಗಳು ಜಂಟಿಯಾಗಿ ನಡೆಸುತ್ತಿರುವ ಈ ಹೋರಾಟವನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿ ಮಾಡಲು ತೀರ್ಮಾನಿಸಲಾಗಿದೆ.
ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪಾದಯಾತ್ರೆ ಹಾದು ಹೋಗುವುದರಿಂದ ಹೆಚ್ಚು ಜನರನ್ನು ಸೇರಿಸಲು ಉದ್ದೇಶಿಸಲಾಗಿದೆ. ಇತ್ತೀಚೆಗೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾಯಿಸಲು ತೀರ್ಮಾನಿಸಿರುವುದನ್ನು ಜೆಡಿಎಸ್‌ಗೆ ಎಸೆದಿರುವ ಸವಾಲು ಎಂದೇ ಜೆಡಿಎಸ್ ನಾಯಕರು ಭಾವಿಸಿದ್ದಾರೆ.
ಪಾದಯಾತ್ರೆಗೆ ಮಾತ್ರ ಸೀಮಿತರಾಗದೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೆ ವಿವಿಧ ಸ್ವರೂಪದ ಹೋರಾಟಗಳನ್ನು ಹಮ್ಮಿಕೊಳ್ಳಲು ಉಭಯ ಪಕ್ಷಗಳ ನಾಯಕರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಾದಯಾತ್ರೆಯಲ್ಲಿ ಬಿಎಸ್‌ವೈ, ಎಚ್.ಡಿ.ಕೆ:
ಪಾದಯಾತ್ರೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರೂ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಬೆಂಗಳೂರಿನಿಂದ ಮೈಸೂರು ಪಾದಯಾತ್ರೆಯಲ್ಲಿ ತಲುಪಲು ಏಳು ದಿನಗಳು ಬೇಕಾಗಲಿದೆ. ಕಾರ್ಯಕ್ರಮವನ್ನು ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಆ.10 ರಂದು ಮೈಸೂರಿನಲ್ಲಿ ಸಮಾರೋಪ ನಡೆಯಲಿದೆ. ಇದರಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವ ಹೋರಾಟದಲ್ಲಿ ಜನ ಸ್ವಯಂ ಪ್ರೇರಿತರಾಗಿ ಭಾಗವಹಿಸಬೇಕು. ಎರಡು ಪಕ್ಷಗಳು ಸೇರಿ ನಡೆಸುವ ಪಾದಯಾತ್ರೆಯಲ್ಲಿ ಹತ್ತಾರು ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲುವುದಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲೂ ಇದರ ಕುರಿತು ಚರ್ಚೆ ಆಗಿದೆ. ಮುಖ್ಯಮಂತ್ರಿಗಳಿಗೆ ಕಿಂಚಿತ್ತು ಗೌರವ ಇದ್ದರೆ, ಮಾಡಿರುವ ಅಪರಾಧ ಒಪ್ಪಿಕೊಂಡು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ರಾಜ್ಯದಲ್ಲಿ ಶೇ 100 ರಷ್ಟು ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶೇ 100 ಭ್ರಷ್ಟ ಎಂಬ ಬಿರುದು ಪಡೆದವರು. ಹಾಗಾಗಿ, ಜನಜಾಗೃತಿಗೆ ಹೋರಾಟ, ಕಾನೂನು ಹೋರಾಟವನ್ನು ಅತ್ಯಂತ ಗಟ್ಟಿಯಾಗಿ ಮುಂದುವರೆಸುತ್ತವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.