ಬೆಂಗಳೂರು: ಹಾಸನಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಮುಖ್ಯಮಂತ್ರಿ, ತಪ್ಪಿತಸ್ಥರ ವಿರುದ್ಧ ಪೊಲೀಸರು ಸೂಕ್ತ ಸೆಕ್ಷನ್ ಹಾಕದಂತೆ ಒತ್ತಡ ಹೇರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
‘ನಿನ್ನೆ ರಾತ್ರಿ ನಮ್ಮ15 ಶಾಸಕರೊಂದಿಗೆ ಪ್ರೀತಂಗೌಡ ಮನೆಗೆ ಭೇಟಿ ನೀಡಿದ್ದೆ. ಘಟನೆ ಕುರಿತು ಮಾಹಿತಿ ಪಡೆದಿದ್ದಾನೆ. ಜತೆಗೆ,ಗಾಯಗೊಂಡಿರುವ ಯುವಕನನ್ನು ಇಂದು ಮಲ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ’ಎಂದರು.
ಪ್ರಕರಣ ಕುರಿತು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲು ನಿರ್ಧರಿಸಿರುವ ಬಿಜೆಪಿ ನಾಯಕರು ಯಡಿಯೂರಪ್ಪ ನೇತೃತ್ವದಲ್ಲಿವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆ ಹೊರಟಿದ್ದರು.
ಪಾದಯಾತ್ರೆಯಲ್ಲಿ ಕೆ.ಎಸ್.ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ,ಶಾಸಕ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ, ‘ನಮ್ಮ ಶಾಸಕರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ಖಂಡಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತದೆ. ಜತೆಗೆ,ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆಪ್ರಕರಣದ ಮಾಹಿತಿ ನೀಡಲಾಗಿದೆ’ ಎಂದು ತಿಳಿಸಿದರು.
‘ವರದಿ ತರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆಯನ್ನು ರಾಜ್ಯಪಾಲರು ನೀಡಿದ್ದಾರೆ’ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.