ADVERTISEMENT

ಮುಡಾ ಪ್ರಕರಣ: ಆಡಳಿತ–ವಿಪಕ್ಷ ಏಟು ಎದುರೇಟು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 16:09 IST
Last Updated 25 ಸೆಪ್ಟೆಂಬರ್ 2024, 16:09 IST
ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಮತ್ತು ಸಪ್ತಗಿರಿಗೌಡ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಪಕ್ಷದ ಕಾರ್ಯಕರ್ತರು ಹೆಜ್ಜೆ ಹಾಕಿದರು
ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಮತ್ತು ಸಪ್ತಗಿರಿಗೌಡ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಪಕ್ಷದ ಕಾರ್ಯಕರ್ತರು ಹೆಜ್ಜೆ ಹಾಕಿದರು   

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ಗೆ ಬುಧವಾರ ಮುತ್ತಿಗೆ ಹಾಕಲು ಯತ್ನಿಸಿದರು.

ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ಮತ್ತು ಬೆಂಗಳೂರು ಉತ್ತರ ಜಿಲ್ಲೆ ಬಿಜೆಪಿ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಶಿವಾನಂದ ವೃತ್ತದಿಂದ ಮುಖ್ಯಮಂತ್ರಿಯವರ ವಿರುದ್ಧ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಹೊರಟಿದ್ದ ಪ್ರತಿಭಟನಕಾರರನ್ನು ಪೊಲೀಸರು ಕುಮಾರಕೃಪಾ ಅತಿಥಿಗೃಹದ ಬಳಿ ವಶಕ್ಕೆ ತೆಗೆದುಕೊಂಡರು.

ಪ್ರತಿಭಟನೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಧೀರಜ್ ಮುನಿರಾಜು, ‘ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಅವರು ಕೂಡಲೇ ರಾಜೀನಾಮೆ ನೀಡಬೇಕು. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದರೆ ಅವರು ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆ ಹುದ್ದೆಗೆ ರಾಜೀನಾಮೆ ನೀಡಬೇಕಿತ್ತು’ ಎಂದರು.

ADVERTISEMENT

‘ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಯುತ್ತದೆ. ಯಾವುದೇ ಕಾರಣಕ್ಕೂ ನಾವು ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ. ರಾಜ್ಯ ವ್ಯಾಪಿ ಹೋರಾಟ ಆಯೋಜಿಸಲಾಗುವುದು. ಬೇರೆಯವರ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಮೊದಲು ನೈತಿಕತೆ ಪ್ರದರ್ಶಿಸಿ ಇನ್ನೊಬ್ಬರಿಗೆ ಮಾದರಿಯಾಗಲಿ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.