ADVERTISEMENT

ಪೆಟ್ರೋಲ್‌- ಡೀಸೆಲ್‌ ದರ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 16:08 IST
Last Updated 17 ಜೂನ್ 2024, 16:08 IST
<div class="paragraphs"><p>ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆ ಏರಿಕೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯ ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹಾಗೂ ಬಿಜೆಪಿ ಮುಖಂಡ ಸಿ ಟಿ ರವಿ ಎತ್ತಿನ ಗಾಡಿಯಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳಲು ಯತ್ನಿಸಿದಾಗ ಪೊಲೀಸರು ತಡೆದರು.</p></div>

ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆ ಏರಿಕೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯ ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹಾಗೂ ಬಿಜೆಪಿ ಮುಖಂಡ ಸಿ ಟಿ ರವಿ ಎತ್ತಿನ ಗಾಡಿಯಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳಲು ಯತ್ನಿಸಿದಾಗ ಪೊಲೀಸರು ತಡೆದರು.

   

(ಪ್ರಜಾವಾಣಿ ಚಿತ್ರ-Photo By/ Krishnakumar P S)

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ADVERTISEMENT

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧಪಕ್ಷದ ನಾಯಕ ಆರ್‌.ಅಶೋಕ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದ ಬಳಿ ಪ್ರತಿಭಟನೆ ನಡೆಸಿ, ಬಳಿಕ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ಮುಂದಾದರು. ಆ ವೇಳೆ ಎಲ್ಲರನ್ನೂ ವಶಕ್ಕೆ ಪಡೆದ ಪೊಲೀಸರು, ನಂತರ ಬಿಡುಗಡೆ ಮಾಡಿದರು.

ದಕ್ಷಿಣಕನ್ನಡ, ಉಡುಪಿ, ಬೆಳಗಾವಿ, ಮಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ– ಧಾರವಾಡ, ಹಾವೇರಿ, ಚಾಮರಾಜನಗರ, ತುಮಕೂರು, ಬಾಗಲಕೋಟೆ ಸೇರಿ ಬಿಜೆಪಿಯ 29 ಸಂಘಟನಾತ್ಮಕ ಜಿಲ್ಲೆಗಳಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆದಿದೆ. ಕೆಲವೆಡೆ ಕಾರಿಗೆ ಹಗ್ಗ ಕಟ್ಟಿ ಎಳೆದರೆ, ಕೆಲವು ಜಿಲ್ಲೆಗಳಲ್ಲಿ ಎತ್ತಿನಗಾಡಿ ಮೆರವಣಿಗೆ ನಡೆಸಿದರು, ತೆಂಗಿನ ಚಿಪ್ಪು ಹಿಡಿದುಕೊಂಡು ಕಿವಿಗೆ ಹೂವು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು. ಕೆಲವು ಕಡೆಗಳಲ್ಲಿ ಅಣಕು ಶವಯಾತ್ರೆ ನಡೆಸಿದರು.

ಉಡುಪಿಯಲ್ಲಿ ಶಾಸಕ ವಿ.ಸುನಿಲ್‌ಕುಮಾರ್‌ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಡಿಯಾಳಿ ಬಳಿ, ಮಣಿಪಾಲ– ಉಡುಪಿ ರಸ್ತೆಯಲ್ಲಿ ಅಲ್ಪಕಾಲ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದರು.

ತೆರಿಗೆ ಏರಿಕೆ ಮಾಡಿದ್ದರೂ ನೆರೆಯ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಲ್ಲಿರುವುದಕ್ಕಿಂತ ಕರ್ನಾಟಕದಲ್ಲಿನ ದರ ಕಡಿಮೆಯಿದೆ. ರಾಜ್ಯದ ಪಾಲಿನ‌ ಹಣವನ್ನು ಕೇಂದ್ರ ಕೊಟ್ಟಿದ್ದರೆ ಮಾರಾಟ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ.
ಸಿದ್ದರಾಮಯ್ಯ, ಮುಖ್ಯಮಂತ್ರಿ

ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಮತ್ತು ಶಾಸಕ ಅಭಯ ಪಾಟೀಲ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎತ್ತುಗಳಿಗೆ ಬೈಕ್‌– ಸ್ಕೂಟರ್‌ಗಳನ್ನು ಕಟ್ಟಿ ಎಳೆದು ಆಕ್ರೋಶ ವ್ಯಕ್ತಪಡಿಸಿದರು. ಈರಣ್ಣ ಕಡಾಡಿ ಮತ್ತು ಅಭಯಪಾಟೀಲ ಅವರು ಬೈಕುಗಳನ್ನು ತಳ್ಳಿದರು. ರಾಣಿ ಚೆನ್ನಮ್ಮ ವೃತ್ತದಲ್ಲಿ ಕೆಲ ಕಾಲ ಸಂಚಾರ್‌ ಬಂದ್‌ ಮಾಡಲಾಯಿತು. 

ಮಂಡ್ಯದ ಸಂಜಯ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಾಯಿ ಬಾಯಿ ಬಡಿದುಕೊಂಡು ಪ್ರತಿಭಟನೆ ನಡೆಸಿದರು. 

ತುಮಕೂರಿನಲ್ಲಿ ಭದ್ರಾವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಶಾಸಕ ಜ್ಯೋತಿ ಗಣೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. 

ಸಿದ್ದರಾಮಯ್ಯ ತಾವು ಮಾತ್ರ ಟೋಪಿ ಹಾಕುವುದಲ್ಲ. ಜನರಿಗೆಲ್ಲ ಟೋಪಿ ಹಾಕುತ್ತಿದ್ದಾರೆ. ಟೋಪಿ ಹಾಕಿ ನಾಮ ಹಾಕಿ ಜನರಿಗೆ ಚೊಂಬು ಕೊಡುತ್ತಿದ್ದಾರೆ.
ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯ

ಬಾಗಲಕೋಟೆಯಲ್ಲಿ ಬಿಜೆಪಿ ಮುಖಂಡರು ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗುವ ಮೂಲಕ ಪ್ರತಿಭಟನೆ ನಡೆಸಿದರು. ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ, ಬಸವರಾಜ ಯಂಕಂಚಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಚಾಮರಾಜನಗರದ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರೆಗೂ ತಳ್ಳು ಗಾಡಿಯ ಮೇಲೆ ಸ್ಕೂಟರ್ ಇರಿಸಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ತೈಲ ಬೆಲೆ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕಿದೆ’ ಎಂದು ಮಾಜಿ ಶಾಸಕ ಎನ್.ಮಹೇಶ್ ವಾಗ್ದಾಳಿ ನಡೆಸಿದರು. ಮಡಿಕೇರಿಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್‌ ಸೈಕಲ್‌ ಸವಾರಿ ಮೂಲಕ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಲು ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಇತರ ನಾಯಕರು ಎತ್ತಿನ ಗಾಡಿಯಲ್ಲಿ ಬಂದರು. ಈ ಸಂದರ್ಭದಲ್ಲಿ ಸರ್ಕಾರದ ಅಣುಕು ಶವಯಾತ್ರೆಯನ್ನೂ ನಡೆಸಿದರು

ಏರಿಕೆ ಹಿಂಪಡೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ

‘ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಸಿರುವುದು ಅವಿವೇಕದ ಮತ್ತು ಜನವಿರೋಧಿ ನಿರ್ಧಾರ. ಸರ್ಕಾರ ತನ್ನ ನಿರ್ಧಾರ ಹಿಂಪಡೆಯುವವರೆಗೆ ಹೋರಾಟವನ್ನು ಮುಂದುವರಿಸುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಅವರು ‘ಬೆಲೆ ಏರಿಕೆ ಹಣದುಬ್ಬರದ ಬಗ್ಗೆ ಅರಿವಿದ್ದರೂ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆ ಬಳಿಕ ತೈಲ ಬೆಲೆ ಏರಿಕೆ ಮಾಡಿರುವುದು ಅಕ್ಷಮ್ಯ ಅಪರಾಧ’ ಎಂದರು. ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್‌ ಮುಖಂಡರು ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದಾರೆ ಎಂದರು.

ಎಲ್ಲರ ಖಾತೆಗಳಿಗೂ ವರ್ಷಕ್ಕೆ ₹1 ಲಕ್ಷ ತಿಂಗಳಿಗೆ ₹2 ಸಾವಿರ ಕೊಡುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು. ಒಂದು ಹೆಜ್ಜೆ ಮುಂದೆ ಹೋಗಿದ್ದ ರಾಹುಲ್‌ಗಾಂಧಿ ಟಕಾಟಕ್‌ ಹಾಕುತ್ತೇವೆ ಎಂದಿದ್ದರು. ಈಗ ಜೇಬಿಗೆ ಟಕಾಟಕ್‌ ಕತ್ತರಿ ಹಾಕಿದ್ದಾರೆ.
ಆರ್‌.ಅಶೋಕ, ವಿರೋಧಪಕ್ಷದ ನಾಯಕ

‘ಜನರು ದಂಗೆ ಎದ್ದು ಸರ್ಕಾರ ಕಿತ್ತು ಹಾಕಬೇಕು’

ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತು ಹಾಕಬೇಕಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು.

ಸಿದ್ದರಾಮಯ್ಯ ಅವರಿಗೆ ಎರಡು ನಾಲಗೆ ಇರಬೇಕು. ಹಿಂದೆ ವಿರೋಧ ಪಕ್ಷದಲ್ಲಿ ಇದ್ದಾಗ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯನ್ನು ಖಂಡಿಸಿದ್ದರು. ಈಗ ಬೆಲೆ ಏರಿಕೆ ಮಾಡಿ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿ ಸಿದ್ದರಾಮಯ್ಯ ಅವರ ಹಳೆಯ ವಿಡಿಯೊ ಒಂದನ್ನು ಪ್ರದರ್ಶಿಸಿದರು. ಕಾಂಗ್ರೆಸ್ ಸರ್ಕಾರ ಬಸ್‌ ಪ್ರಯಾಣದ ಟಿಕೆಟ್‌ ದರ ಶೇ 12ರಷ್ಟು ಹೆಚ್ಚಿಸಲು ಚರ್ಚೆ ನಡೆಸಿದೆ. ಕಾಫಿ ಟೀ ದರವೂ ಹೆಚ್ಚಲಿದೆ ಎಂದರು.

ಪ್ರತಿಭಟನೆ ವೇಳೆ ಮೃತಪಟ್ಟ ಭಾನುಪ್ರಕಾಶ್‌ 

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿಧಾನಪರಿಷತ್‌ನ ಮಾಜಿ ಸದಸ್ಯ ಬಿಜೆಪಿ ಮುಖಂಡ ಎಂ.ಬಿ.ಭಾನುಪ್ರಕಾಶ್ ದಿಢೀರ್ ಅಸ್ವಸ್ಥರಾಗಿ ಕುಸಿದುಬಿದ್ದು ಸಾವನ್ನಪ್ಪಿದರು.

ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ಅಣಕು ಶವ ಯಾತ್ರೆ ನಡೆಸಿದ ಸ್ಥಳೀಯ ಬಿಜೆಪಿ ಮುಖಂಡರು ಕುಳಿತು ರಘುಪತಿ ರಾಘವ ರಾಜಾರಾಮ್ ಭಜನೆ ಹಾಡುತ್ತಿದ್ದರು. ಇದಕ್ಕೂ ಮುನ್ನ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ ಕುದುರೆ ಮೇಲೆ ಏರಿ ಬಂದು ಗಮನ ಸೆಳೆದಿದ್ದರು. ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಅಣುಕು ಶವ ಯಾತ್ರೆ ಕೂಡ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.