ADVERTISEMENT

ಡಿಸೆಂಬರ್‌ ಬಳಿಕ ‘ಭಿನ್ನರ’ ಬಾಗಿಲು ಬಂದ್‌: ಬಿ.ವೈ. ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 15:58 IST
Last Updated 22 ನವೆಂಬರ್ 2024, 15:58 IST
<div class="paragraphs"><p>ಬಿ.ವೈ. ವಿಜಯೇಂದ್ರ</p></div>

ಬಿ.ವೈ. ವಿಜಯೇಂದ್ರ

   

ನವದೆಹಲಿ: ಕರ್ನಾಟಕ ಬಿಜೆಪಿಯಲ್ಲಿರುವ ಐದಾರು ಬಾಗಿಲುಗಳು ಡಿಸೆಂಬರ್ ಬಳಿಕ ಮುಚ್ಚಲಿವೆ. ಒಂದೇ ಬಾಗಿಲು ಆಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾರ್ಮಿಕವಾಗಿ ಹೇಳಿದರು. 

ಬಿಜೆಪಿ ರಾಜ್ಯ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಭಾಗಿಯಾಗಲು ನವದೆಹಲಿಗೆ ಬಂದಿರುವ ಅವರು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತಿತರರು ತಮ್ಮ ವಿರುದ್ಧ ನಡೆಸುತ್ತಿರುವ ಟೀಕಾಪ್ರಹಾರಗಳ ಕುರಿತು ಪ್ರತಿಕ್ರಿಯಿಸಿದ ಅವರು, ‘ಪಕ್ಷದ 2–3 ನಾಯಕರು ಪ್ರತ್ಯೇಕವಾಗಿ ವಕ್ಫ್‌ ಹೋರಾಟ ನಡೆಸಲು ಮುಂದಾಗಿದ್ದಾರೆ. ನಾನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿರುವುದನ್ನು ಅರಗಿಸಿಕೊಳ್ಳಲು ಅವರಿಗೆ ಸ್ವಲ್ಪ ಸಮಯ ಬೇಕು. ಪಕ್ಷದ ಉಳಿದ ಹಿರಿಯ ನಾಯಕರು ನನ್ನ ಜತೆಗೆ ಇದ್ದಾರೆ’ ಎಂದರು. 

ADVERTISEMENT

‘ಪಕ್ಷದ ಯಾವುದೇ ನಾಯಕರ ವಿರುದ್ಧ ಚಾಡಿ ಹೇಳಲು ನಾನು ಇಲ್ಲಿಗೆ ಬಂದಿಲ್ಲ. ಅಷ್ಟು ಪುರುಸೊತ್ತು ನನಗಿಲ್ಲ’ ಎಂದು ಅವರು ಹೇಳಿದರು. 

ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅರೆಬೆಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ದಿನಕ್ಕೊಂದು ನಿಯಮಗಳನ್ನು ರೂಪಿಸುತ್ತಿದ್ದಾರೆ.  ಮುಖ್ಯಮಂತ್ರಿಯವರು ಬಡವರ ಮೇಲೆ ಪ್ರಹಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕರಾಗಿದ್ದರೆ ಗ್ಯಾರಂಟಿ ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ನಬಾರ್ಡ್ ವಿಷಯದಲ್ಲಿ ಸಿದ್ದರಾಮಯ್ಯ ಅವರು ಕಪಟ ನಾಟಕ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬರುವ ಹಣದ ಕುರಿತು ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಬ್ಯಾಂಕ್‍ಗಳು ಶೇ 40ರಷ್ಟು ಮೊತ್ತವನ್ನು ಆದ್ಯತಾ ವಲಯವಾದ ಕೃಷಿ ಕ್ಷೇತ್ರಕ್ಕೆ ಕೊಡುತ್ತಿರುವುದು ಸಿದ್ದರಾಮಯ್ಯ ಅವರಿಗೆ ತಿಳಿದಿಲ್ಲವೇ ಎಂದು ಅವರು ಪ್ರಶ್ನಿಸಿದರು. 

ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿ ಆಸಕ್ತಿ ಹೊಂದಿಲ್ಲ. ಮುಖ್ಯಮಂತ್ರಿಯವರ ನಡವಳಿಕೆಯಿಂದ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.