ADVERTISEMENT

ಬಿಜೆಪಿ ಅಧ್ಯಕ್ಷ ಸ್ಥಾನ: ವಿಜಯೇಂದ್ರ ಹೆಸರೂ ಮುನ್ನೆಲೆಗೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2023, 16:20 IST
Last Updated 2 ನವೆಂಬರ್ 2023, 16:20 IST
ಬಿ.ವೈ. ವಿಜಯೇಂದ್ರ
ಬಿ.ವೈ. ವಿಜಯೇಂದ್ರ   

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹಿಂದೇಟು ಹಾಕುತ್ತಿರುವುದರಿಂದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರ ಹೆಸರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. 

ತಾವು ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ಶೋಭಾ ಇತ್ತೀಚೆಗೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರನ್ನು ನೇಮಿಸುವ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಒಲವು ಹೊಂದಿದ್ದಾರೆ. ಆದರೆ ಇದಕ್ಕೆ ಪ್ರಧಾನಿ ಮೋದಿ ಅವರ ಒಪ್ಪಿಗೆಯ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ. 

ಜನಪ್ರಿಯತೆ, ಹಣ ಖರ್ಚು ಮಾಡುವ ಹಾಗೂ ಪಕ್ಷವನ್ನು ಸಂಘಟಿಸುವ ಸಾಮರ್ಥ್ಯ ವಿಜಯೇಂದ್ರ ಅವರಿಗಿದೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷವನ್ನು ಕಟ್ಟಬಲ್ಲರು. ಯಡಿಯೂರಪ್ಪ ಅವರೂ ಪೂರ್ಣ ಮನಸ್ಸಿನಿಂದ ಕೆಲಸ ಮಾಡಬಲ್ಲರು ಎಂಬ ಚರ್ಚೆಯೂ ಪಕ್ಷದಲ್ಲಿ ನಡೆದಿದೆ.

ADVERTISEMENT

ಶಾಸಕ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತೆರೆದ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಅವರಿಗೆ ವಿಶ್ರಾಂತಿಯ ಅಗತ್ಯ ಇದೆ. ಹೀಗಾಗಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಬಸನಗೌಡ ಪಾಟೀಲ ಯತ್ನಾಳ ಮತ್ತು ವಿ.ಸುನಿಲ್ ಕುಮಾರ್‌ ಹೆಸರುಗಳು ಮುನ್ನೆಲೆಗೆ ಬಂದಿದೆ. ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯತರ ನೇಮಕಗೊಂಡರೆ ವಿರೋಧ ಪಕ್ಷದ ಸ್ಥಾನ ಹಿಂದುಳಿದ ವರ್ಗಕ್ಕೆ ಹೋಗುತ್ತದೆ. ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯಿತರೇತರು ನೇಮಕಗೊಂಡರೆ ಆಗ ಯತ್ನಾಳ ಅವರಿಗೆ ಅವಕಾಶ ಸಿಗಬಹುದು ಎಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆದಿದೆ.

ಯಾರನ್ನಾದರೂ ಮಾಡಲಿ:

‘ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ? ಶೋಭಾ ಅವರ ಹೆಸರು ಕೇಳಿ ಬರುತ್ತಿದೆಯಲ್ಲ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ‘ಯಾರನ್ನಾದರೂ ಮಾಡಲಿ, ಯಾರಾದರೂ ಒಬ್ಬರು ಸದ್ಯವೇ ನೇಮಕಗೊಳ್ಳಲಿದ್ದಾರೆ’ ಎಂದು ಯಡಿಯೂರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.