ADVERTISEMENT

ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಸುರೇಶ್‌ಕುಮಾರ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2019, 20:15 IST
Last Updated 24 ಮಾರ್ಚ್ 2019, 20:15 IST
   

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ₹75 ಕೋಟಿ ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿರುವುದು ಈಗ ಬಯಲಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಎಸ್. ಸುರೇಶ್‌ಕುಮಾರ್ ಆಗ್ರಹಿಸಿದರು.

ಅಕ್ರಮಗಳಲ್ಲಿ ಭಾಗಿಯಾಗಿರುವ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದಲ್ಲಿ ಮುಂದುವರಿಯಲು ಯಾವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಚೌಕಿದಾರ್‌ ಚೋರ್‌’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಿಂದ ಡಿ.ಕೆ. ಶಿವಕುಮಾರ್ ಅವರನ್ನು ಕೈಬಿಡಲು ಸೂಚಿಸುತ್ತಾರೆಯೇ, ಮತ್ತೊಬ್ಬರ ಮೇಲೆ ಕೆಸರೆರಚುವ ಕಾಂಗ್ರೆಸ್‌ ಮುಖಂಡರು ಕಳಂಕಿತ ಸಚಿವರನ್ನು ಕೈಬಿಡಲು ಒತ್ತಡ ಹೇರುವರೇ ಎಂದು ಪ್ರಶ್ನಿಸಿದರು.

ADVERTISEMENT

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ರಾಷ್ಟ್ರೀಯ ನಾಯಕರಿಗೆ ₹1,800 ಕೋಟಿ ಹಂಚಿದ್ದಾರೆ ಎಂಬ ನಕಲಿ ಡೈರಿಯನ್ನು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲ ಸೃಷ್ಟಿಸಿದ್ದು, ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಡೈರಿ ನಕಲಿ ಎಂದು ಆದಾಯ ತೆರಿಗೆ ಇಲಾಖೆ ಪ್ರಧಾನ ಮುಖ್ಯ ಆಯುಕ್ತರೇ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‌ನವರು ದುರುದ್ದೇಶದಿಂದ ನಕಲಿ ಡೈರಿ ಸೃಷ್ಟಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಇದನ್ನು ಆಧರಿಸಿ ಟ್ವೀಟ್‌ ಮಾಡುವ ಮೂಲಕ ಬಿಜೆಪಿಗೆ ಕಳಂಕ ತರಲು ಯತ್ನಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ‌ಒತ್ತಾಯಿಸಿದರು.‌

ಕಾಂಗ್ರೆಸ್ ಮತ್ತು ಜೆಡಿಎಸ್‌ ಮುಖಂಡರು ಬಿಜೆಪಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಬೇಳೂರು ಗೋಪಾಲಕೃಷ್ಣ ಅವರು ‘ಪ್ರಧಾನಿ ಅವರನ್ನು ಸಾಯಿಸಿ’ ಎಂದಿದ್ದರು. ಈಗ ಶಾಸಕ ಕೆ.ಎಂ. ಶಿವಲಿಂಗೇಗೌಡ ‘ಪ್ರಧಾನಿಗೆ ಕಲ್ಲಿನಿಂದ ಹೊಡೆಯಿರಿ’ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.