ಮುಳಬಾಗಿಲು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಹೋರಾಟ ಮತ್ತು ರಾಜ್ಯ ಪ್ರವಾಸಕ್ಕೆ ತಾಲ್ಲೂಕಿನ ಕುರುಡುಮಲೆ ಗಣೇಶನಿಗೆ ಭಾನುವಾರ ಪೂಜೆ ಸಲ್ಲಿಸುವ ಮೂಲಕ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿ.ವಿ.ಸದಾನಂದಗೌಡ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು.
ಕಾವೇರಿ ನೀರು, ಬರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ವಿಚಾರ ಇಟ್ಟುಕೊಂಡು ಪ್ರವಾಸ ನಡೆಸುವುದಾಗಿ ಯಡಿಯೂರಪ್ಪ ತಿಳಿಸಿದರು.
‘ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಒಂದು ಕಿ.ಮೀ ರಸ್ತೆ ಕೂಡ ಅಭಿವೃದ್ಧಿಪಡಿಸಿಲ್ಲ. ಭೀಕರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರನ್ನು ಮರೆತಿದೆ. ಗಣೇಶ ಚತುರ್ಥಿ ಬಳಿಕ ಮೊದಲು ಕಾವೇರಿ ನದಿ ನೀರಿನ ವಿಚಾರವಾಗಿ ಮಂಡ್ಯ, ಮೈಸೂರು, ಚಾಮರಾಜನಗರ ಭಾಗದಲ್ಲಿ ಪ್ರವಾಸ ಕೈಗೊಳ್ಳುತ್ತೇವೆ’ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೇಕ್ ಕತ್ತರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಆಚರಿಸಿದರು. ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕೆಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.