ಶಿವಮೊಗ್ಗ: ಬೆಂಗಳೂರಿನಲ್ಲಿ ಈಡಿಗ ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ತಮ್ಮ ಪಕ್ಷದ ನಾಯಕರ ವಿರುದ್ಧವೇ ಪರೋಕ್ಷವಾಗಿ ಹೇಳಿಕೆ ನೀಡಿದಂತಿದೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ರಾಜಕೀಯ ಭೂಕಂಪನದ ಮುನ್ಸೂಚನೆ ತೋರುತ್ತಿದೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಶಿವಮೊಗ್ಗದಲ್ಲಿ ಭಾನುವಾರ ಹೇಳಿದ್ದಾರೆ.
‘ಹ್ಯೂಬ್ಲೋ ವಾಚ್ ಕಟ್ಟಿಕೊಂಡು, ಪಂಚೆ ಉಟ್ಟುಕೊಂಡು ಒಳಗೆ ಖಾಕಿ ಚಡ್ಡಿ ಧರಿಸುವುದು ಸಮಾಜ ವಾದವಲ್ಲ’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಪರೋಕ್ಷವಾಗಿ ಹೇಳಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯರ ಹೆಸರು ಹೇಳದೆಯೇ ಭಾಷಣದುದ್ದಕ್ಕೂ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮಳೆ ಕಾಣೆಯಾಗಿದೆ. ಇದು ಕಾಕತಾಳಿಯವೋ ಇಲ್ಲವೇ ಹಾಗೂ ಆ ಪಕ್ಷದ ಕಾಲ್ಗುಣವೋ.. ಹೀಗೆಂದು ರಾಜ್ಯದ ಜನರೇ ಮಾತಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದ ಸಚಿವರಿಗೆ ಹೊಸ ಕಾರು ಖರೀದಿ ಮಾಡಲು ಸರ್ಕಾರದ ಬಳಿ ಹಣ ಇದೆ. ಆದರೆ ಬರಗಾಲ ಘೋಷಣೆಗೆ ಮೀನಾಮೇಷ ಎಣಿಸಲಾಗುತ್ತಿದೆ. ಮಳೆಗಾಲದಲ್ಲಿಯೇ ಈ ಪರಿಸ್ಥಿತಿ ಆದರೆ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ರಾಜ್ಯದ ಜನರು ಪರದಾಡುವ ಪರಿಸ್ಥಿತಿ ಬರಬಹುದು ಎಂದರು.
ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆ ಸುಸ್ಥಿರವಾಗಿದೆ ಎಂದು ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಆದರೆ, ಸರ್ಕಾರ ಆಡಳಿತಕ್ಕೆ ಬಂದು 100 ದಿನ ಕಳೆದರೂ ಯಾವುದೇ ಹೊಸ ಯೋಜನೆ ಘೋಷಣೆ ಮಾಡಿಲ್ಲ. ಗುತ್ತಿಗೆದಾರರಿಗೆ ಮೂರು ತಿಂಗಳಿನಿಂದ ಹಣ ಬಿಡುಗಡೆ ಮಾಡಿಲ್ಲ ಎಂದರು.
ಕಾಂಗ್ರೆಸ್ ಆಡಳಿತಕ್ಕೆ ಬಂದು 40 ದಿನಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅದು ಪ್ರೇಮ ಪತ್ರವಲ್ಲ. ಅಸಹಾಯಕತೆ ಹೊರಹಾಕುವ ಪತ್ರ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾವಾರು ಸರಣಿ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಚದಲ್ಲಿ ಬಹುಮತ ಇದ್ದರೂ ಕೂಡ ಒಳಬೇಗುದಿ ಇದೆ ಎಂಬುದನ್ನು ಇದು ತೋರಿಸುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.