ಬೆಂಗಳೂರು: ಪರಿಶಿಷ್ಟರು ಹಾಗೂ ಹಿಂದುಳಿದವರ ಕಲ್ಯಾಣಕ್ಕೆ ಹೆಚ್ಚು ಅನುದಾನ ಒದಗಿಸುವ ಮೂಲಕ ಮುಖ್ಯಮಂತ್ರಿ ಇವೆರಡೂ ವರ್ಗಗಳನ್ನು ಓಲೈಸುವ ಪ್ರಯತ್ನ ಮಾಡಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಗೆ ₹ 30,445 ಕೋಟಿ ಒದಗಿಸಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ₹ 134 ಕೋಟಿ ತೆಗೆದಿರಿಸಿದ್ದಾರೆ. ಸವಿತಾ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಪ್ರಕಟಿಸಿದ್ದಾರೆ.
ನಿರ್ದಿಷ್ಟ ಸಮುದಾಯಗಳಿಗೆ ಈ ಅನುದಾನವನ್ನು ನೇರವಾಗಿ ತಲುಪಿಸಲು ಒಬ್ಬರು ನೋಡಲ್ ಅಧಿಕಾರಿ ಮತ್ತು ನಾಲ್ವರು ಸದಸ್ಯರನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ಮತ್ತು ಸಾಮಾನ್ಯ ವಿದ್ಯಾರ್ಥಿಗಳಿಗಾಗಿ 30 ಸಂಯುಕ್ತ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲು ₹ 100 ಕೋಟಿ ಮೀಸಲಿಡಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 100 ವಸತಿ ಶಾಲೆಗಳಲ್ಲಿ ಪಿಯುಸಿ (ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸ್) ತರಗತಿ ಆರಂಭಿಸುವ ಮೂಲಕ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ. ವಿಭಾಗ ಮಟ್ಟದಲ್ಲಿ ನಾಲ್ಕು ಮೊರಾರ್ಜಿ ಪದವಿ ಪೂರ್ವ ಕಾಲೇಜುಗಳಲ್ಲಿ ಐಐಟಿ ಮತ್ತು ನೀಟ್ ಪರೀಕ್ಷಾ ತರಬೇತಿ ಕೇಂದ್ರ ಸ್ಥಾಪಿಸಲು ₹ 4 ಕೋಟಿ ನೀಡಲು ಉದ್ದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.