ADVERTISEMENT

ಶೇ 99ರಷ್ಟು ಗ್ರಾಮಗಳಿಗೆ ಸ್ಮಶಾನ ಭೂಮಿ: ಸರ್ಕಾರ

​ಪ್ರಜಾವಾಣಿ ವಾರ್ತೆ
Published 8 ಜೂನ್ 2023, 20:33 IST
Last Updated 8 ಜೂನ್ 2023, 20:33 IST
ಸಾಂದರ್ಭಿಕ ಚಿತ್‌ರ
ಸಾಂದರ್ಭಿಕ ಚಿತ್‌ರ   

ಬೆಂಗಳೂರು: ‘ರಾಜ್ಯದಲ್ಲಿ ಜನವಸತಿಯಿರುವ ಒಟ್ಟು 28,281 ಗ್ರಾಮಗಳ ಪೈಕಿ ಈವರೆಗೂ 28,276 ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದ್ದು, ಒಟ್ಟಾರೆ ಶೇ 99.8ರಷ್ಟು ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.

ಈ ಸಂಬಂಧ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರಿ ವಕೀಲರು ಈ ಕುರಿತಂತೆ ನ್ಯಾಯಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದರು.

‘ಒತ್ತುವರಿ ಸೇರಿದಂತೆ ಭವಿಷ್ಯದಲ್ಲಿ ಉದ್ಭವಿಸುವ ಯಾವುದೇ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸ್ಮಶಾನ ಭೂಮಿಯನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಾದ್ಯಂತ 16 ಜಿಲ್ಲೆಗಳ 606 ಗ್ರಾಮಗಳ ಜಮೀನನ್ನು ಶೀಘ್ರವೇ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲಾಗುವುದು. ಈ ಸಂಬಂಧ ಕಂದಾಯ ದಾಖಲೆಗಳ ನೋಂದಣಿ ಕಾರ್ಯಕ್ಕೂ ಚಾಲನೆ ನೀಡಲಾಗಿದೆ‘ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ. 

ADVERTISEMENT

‘ರಾಜ್ಯದಲ್ಲಿ ಒಟ್ಟು 30,781 ಗ್ರಾಮಗಳಲ್ಲಿ 2,500 ಬೇಚರಕ್ (ಜನವಸತಿ ಇಲ್ಲದ) ಗ್ರಾಮಗಳಿವೆ. ಜನವಸತಿಯ 28,281 ಗ್ರಾಮಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಒಟ್ಟು 28,276 ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ. ಉಡುಪಿ ಜಿಲ್ಲೆಯ ಎರಡು ಮತ್ತು ರಾಯಚೂರು ಜಿಲ್ಲೆಯಲ್ಲಿನ ಮೂರು ಗ್ರಾಮಗಳಲ್ಲಿ ಸ್ಮಶಾನ ಭೂಮಿಗಾಗಿ ಖಾಸಗಿಯವರ ಭೂಮಿ ಗುರುತಿಸಲಾಗಿದೆ. ಸರ್ಕಾರಿ ಜಮೀನು ಲಭ್ಯವಿಲ್ಲದಿರುವುದೇ ಇದಕ್ಕೆ ಕಾರಣ’ ಎಂದು ಪತ್ರದಲ್ಲಿ ವಿವರಿಸಲಾಗಿದೆ. 

‘ಸರ್ಕಾರ ಮತ್ತು ಅರ್ಜಿದಾರರು ಕೋರ್ಟ್‌ಗೆ ನೀಡಿರುವ ಮಾಹಿತಿಗಳು ಒಂದಕ್ಕೊಂದು ತಾಳೆಯಾಗುತ್ತಿಲ್ಲ. ಆದ್ದರಿಂದ, ಸಂಬಂಧಿಸಿದ ಜಿಲ್ಲಾಧಿಕಾರಿಗಳು ಇದೇ 22ರಂದು ವಿಚಾರಣೆಗೆ ಖುದ್ದು ಹಾಜರಾಗಬೇಕು’ ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.