ADVERTISEMENT

ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಲಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜೂನ್ 2024, 14:58 IST
Last Updated 4 ಜೂನ್ 2024, 14:58 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಲಿದೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. 

2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತವಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಲಸಂಪನ್ಮೂಲ ಸಚಿವರಾಗಿ, ಗೃಹ ಸಚಿವರಾಗಿ ನಂತರ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. 

ADVERTISEMENT

ಸದ್ಯ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗುವ ಮೂಲಕ ಬಸವರಾಜ ಬೊಮ್ಮಾಯಿ ಸಂಸತ್ ಪ್ರವೇಶಿಸಿದ್ದು, ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಉತ್ತರಾಧಿಕಾರಿಯಾಗಿ ಯಾರಾಗ್ತಾರೆ ಎಂಬ ಚರ್ಚೆಗಳು ಶುರುವಾಗಿವೆ.

ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ, ಸ್ಥಳೀಯ ಬಿಜೆಪಿ ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಶಶಿಧರ ಯಲಿಗಾರ ಅವರ ಹೆಸರು ಮುನ್ನೆಲೆಗೆ ಬಂದಿದ್ದು, ಬಸವರಾಜ ಬೊಮ್ಮಾಯಿ ಹಾಗೂ ವರಿಷ್ಠರು ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಭರ್ಜರಿಯಾಗಿ ಗೆದ್ದಿದ್ದು ಹೀಗಾಗಿ ಚೆನ್ನಪಟ್ಟಣವೂ ಉಪ ಚುನಾವಣೆ ಎದುರಿಸಲಿದೆ. ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಸಿಗಬಹುದು ಎನ್ನಲಾಗಿದೆ.

ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದು ಸಂಡೂರು ಕೂಡ ಉಪಚುನಾವಣೆ ಎದುರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.