ADVERTISEMENT

ಭಿನ್ನರ ವಿರುದ್ಧ ಬಿ.ವೈ. ವಿಜಯೇಂದ್ರ ರಕ್ಷಣಾತ್ಮಕ ನಡೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2023, 15:14 IST
Last Updated 23 ಡಿಸೆಂಬರ್ 2023, 15:14 IST
<div class="paragraphs"><p>ಬಿ.ವೈ. ವಿಜಯೇಂದ್ರ</p></div>

ಬಿ.ವೈ. ವಿಜಯೇಂದ್ರ

   

ನವದೆಹಲಿ: ‘ಕರ್ನಾಟಕದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಪಕ್ಷದ ಎಲ್ಲ ಮುಖಂಡರು ಪ್ರೀತಿ ವಿಶ್ವಾಸದಿಂದ ಇದ್ದು ಪಕ್ಷ ಸಂಘಟನೆ ಮಾಡೋಣ’ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಿನ್ನರ ವಿರುದ್ಧ ರಕ್ಷಣಾತ್ಮಕ ಹೆಜ್ಜೆ ಇಟ್ಟಿದ್ದಾರೆ. 

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಯಾವುದೇ ನಾಯಕರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿಲ್ಲ. ದೂರು ನೀಡುವುದರಲ್ಲಿ ನನಗೆ ವಿಶ್ವಾಸ ಹಾಗೂ ನಂಬಿಕೆ ಇಲ್ಲ’ ಎಂದು ಸ್ಪಷ್ಟಪಡಿಸಿದರು. 

ADVERTISEMENT

‘ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ನಿಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ. ಈ ಬಗ್ಗೆ ಹೈಕಮಾಂಡ್‌ ಸೂಚನೆ ನೀಡಿದೆಯಾ’ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಾನು ರಾಜ್ಯ ಘಟಕದ ಅಧ್ಯಕ್ಷ ಎಂಬ ಅಹಂಕಾರ ಇಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಗ ಎಂಬ ದುರಂಹಕಾರವೂ ಇಲ್ಲ’ ಎಂದರು. 

‘ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌. ಸಂತೋಷ್‌ ಅವರು ನನಗೆ ಬಹು ದೊಡ್ಡ ಜವಾಬ್ದಾರಿ ನೀಡಿದ್ದಾರೆ. ನಾವೆಲ್ಲ ಜತೆಗೂಡಿ ದುಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಿದೆ. ಪಕ್ಷದ ಹಿರಿಯ ಕಿರಿಯ ನಾಯಕರೆಲ್ಲ ಇದಕ್ಕೆ ಕೈಜೋಡಿಸಬೇಕು. ಪಕ್ಷದ ವಿಷಯಗಳ ಕುರಿತು ಸಾರ್ವಜನಿಕವಾಗಿ ಮಾತನಾಡಬಾರದು. ಯಾವುದೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು ’ ಎಂದು ಮನವಿ ಮಾಡಿದರು. 

’ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ–ಜೆಡಿಎಸ್‌ ಮೈತ್ರಿಕೂಟ ಗೆಲುವು ಸಾಧಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ನಾವೆಲ್ಲ ಜತೆಗೂಡಿ ಕೆಲಸ ಮಾಡಬೇಕು’ ಎಂದರು. 

‘ನಿಮ್ಮ ವಿರುದ್ಧ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಿರಂತರ ವಾಗ್ದಾಳಿ ನಡೆಸುತ್ತಿರುವವರು ಪ್ರೀತಿ ವಿಶ್ವಾಸದ ಮಾತು ಕೇಳುತ್ತಾರೆಯೇ’ ಎಂಬ ಪ್ರಶ್ನೆಗೆ ‘ಧನ್ಯವಾದಗಳು’ ಎಂದು ಹೇಳಿ ವಿಜಯೇಂದ್ರ ಪತ್ರಿಕಾಗೋಷ್ಠಿ ಮುಗಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.