ಕುಂದಾಪುರ: ಮಾಜಿ ಶಾಸಕ ಹಾಗೂ 3ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಅಮಾಸೆಬೈಲ್ ಗೋಪಾಲಕೃಷ್ಣ ಕೊಡ್ಗಿ ( 93) ಸೋಮವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಎ.ಜಿ.ಕೊಡ್ಗಿ ಎಂದೇ ಜನಜನಿತರಾಗಿದ್ದರು.
ಅವರಿಗೆ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಚಿಕಿತ್ಸೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಗಳ ವೈಫಲ್ಯಕ್ಕೆ ಒಳಗಾಗಿದ್ದರು.
ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಎರಡು ಅವಧಿಗೆ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು. ಸಹಕಾರಿ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. 1993ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಅವರು, ಕರಾವಳಿಯಲ್ಲಿ ಬಿಜೆಪಿ ಕಟ್ಟುವಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.
ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಸೇರಿದಂತೆ ರಾಷ್ಟ್ರೀಯ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಲವಾರು ನಾಯಕರನ್ನು ರೂಪಿಸಿದ್ದರು. ಈಚೆಗೆ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದು, ಅಮಾಸೆಬೈಲ್ ಚಾರಿಟಬಲ್ ಟ್ರಸ್ಟ್ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
7ನೇ ರಾಷ್ಟ್ರೀಯ ಸೂರ್ಯಮಿತ್ರ ಪ್ರಶಸ್ತಿ, ಮಣಿಪಾಲ ಗ್ರೂಪ್ಸ್ ವತಿಯ ಗೌರವ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ. ‘ಗ್ರಾಮೀಣಾಭಿವೃದ್ಧಿಯಲ್ಲಿ ಕೊಡ್ಗಿ ಚಿಂತನೆಗಳು’ ಎಂಬ ಕೃತಿಯನ್ನು 2019ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊರತಂದಿತ್ತು.
ಪತ್ನಿ ಸುನಂದಾ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣಕುಮಾರ ಕೊಡ್ಗಿ, ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರಕುಮಾರ ಕೊಡ್ಗಿ ಸೇರಿದಂತೆ ಐವರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ಅಂತ್ಯಕ್ರಿಯೆ: ಎ.ಜಿ.ಕೊಡ್ಗಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅಮಾಸೆಬೈಲಿನಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆ ವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಸ್ವಗೃಹದ ಸಮೀಪ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.