ಬೆಂಗಳೂರು: ಪರಿಶಿಷ್ಟ ಜಾತಿಯ ವಿವಿಧ ಪ್ರವರ್ಗಗಳ ನಡುವೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ವಿಚಾರದಲ್ಲಿ ಸಚಿವ ಸಂಪುಟವೇ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಸಂಪುಟ ಉಪ ಸಮಿತಿ ಸಭೆ ಬಳಿಕ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಎ.ಜೆ. ಸದಾಶಿವ ಆಯೋಗದ ವರದಿಯನ್ನು ಒಪ್ಪಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸಂಪುಟದಲ್ಲಿ ತೀರ್ಮಾನ ಆಗಬೇಕು. ಆ ಬಳಿಕವಷ್ಟೇ ವರದಿಯನ್ನು ಬಹಿರಂಗಪಡಿಸಲು ಮತ್ತು ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಲು ಅವಕಾಶ ದೊರಕುತ್ತದೆ’ ಎಂದರು.
ಜನವರಿ ಅಂತ್ಯದೊಳಗೆ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವಂತೆ ಕಾಂಗ್ರೆಸ್ ಪಕ್ಷವು ಬೇಡಿಕೆ ಇಟ್ಟಿರುವ ಕುರಿತು ಪ್ರಶ್ನಿಸಿದಾಗ, ‘ಆಯೋಗದ ವರದಿಯ ಪರಿಶೀಲನೆ ನಡೆಯುತ್ತಿದೆ. ಈಗಲೇ ಪ್ರತಿಭಟನೆ ನಡೆಸುವುದು, ಬೇಡಿಕೆ ಇಡುವುದು, ಗಡುವು ನೀಡುವುದರಲ್ಲಿ ಅರ್ಥವಿಲ್ಲ’ ಎಂದು ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.