ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೇ 3ರಂದು ಬೆಂಗಳೂರಿಗೆ ಬರಲಿದ್ದು, ಆ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
‘ದೆಹಲಿಯಲ್ಲಿಶನಿವಾರ ನಡೆಯಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಮುಖ್ಯನ್ಯಾಯಮೂರ್ತಿಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದೇನೆ. ಈ ಸಂದರ್ಭದಲ್ಲಿ ವರಿಷ್ಠರ ಜತೆ ಚರ್ಚೆ ಮಾಡುವ ಸಾಧ್ಯತೆ ಇಲ್ಲ. ಅಮಿತ್‌ಶಾ ಅವರು ಬೆಂಗಳೂರಿಗೆ ಬಂದಾಗ ಈ ವಿಷಯ ಪ್ರಸ್ತಾಪಿಸುತ್ತೇನೆ’ ಎಂದು ತಿಳಿಸಿದ್ದಾರೆ.
ಶಾ ಅವರು ಬೆಂಗಳೂರಿನಲ್ಲಿ ಮೇ 3 ರಂದು ನೃಪತುಂಗ ವಿಶ್ವವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ. ಬಳ್ಳಾರಿಯ ಫೊರೆನ್ಸಿಕ್ ಸೈನ್ಸ್ ಲ್ಯಾಬ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದು, ಸಂಜೆ 4ಕ್ಕೆ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ. ಸಂಜೆ 5ಕ್ಕೆ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ಸಮಾರೋಪದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.