ADVERTISEMENT

ಅನರ್ಹರ ಬಿಪಿಎಲ್ ಕಾರ್ಡ್ ಮಾತ್ರ ರದ್ದು ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 11:21 IST
Last Updated 18 ನವೆಂಬರ್ 2024, 11:21 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಅಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ನಾನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕರ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ವಿಚಾರಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ‘2017ರಲ್ಲಿ 1 ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿಯವರು ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂತಹ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ? ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಕುಮಾರಸ್ವಾಮಿ  ಅವರು ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ?. ನಾವು ರಾಜ್ಯದಿಂದ ಕೇಂದ್ರಕ್ಕೆ ₹4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು ₹59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ. ಬರೀ ಮಾತನಾಡಿದರೆ ಪ್ರಯೋಜನವೇನು? ಎಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ?’ ಎಂದು ಪ್ರಶ್ನಿಸಿದ್ದಾರೆ.

ADVERTISEMENT

‘ನಬಾರ್ಡ್ ವತಿಯಿಂದ ಕಳೆದ ವರ್ಷ ₹5,600 ಕೋಟಿ ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ₹2,340 ಕೋಟಿ ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು ಶೇ 58 ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರಸ್ವಾಮಿ, ಪ್ರಲ್ಹಾದ ಜೋಶಿ ಅವರು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ? ರೈತರಿಗೆ ಅನ್ಯಾಯ ಮಾಡಬೇಡಿ, ಇದು ದ್ರೋಹದ ಕೆಲಸ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

‘ನಾನು ಅಧಿಕಾರಕ್ಕೆ ಬಂದ ನಂತರ 5 ಲಕ್ಷದವರೆಗೆ ಬಡ್ಡಿರಹಿತ ಸಾಲ, 15 ಲಕ್ಷದವರೆಗೆ ಶೇ 3ರ ದರದಲ್ಲಿ ಸಾಲ ನೀಡಲಾಗಿದೆ. ನಬಾರ್ಡ್ ಹಣಕಾಸಿನ ಮಂತ್ರಿಗಳ ಕೆಳಗೆ ಬರುತ್ತದೆ. ನಿರ್ಮಲಾ ಸೀತಾರಾಮನ್ ಏನು ಮಾಡುತ್ತಿದ್ದಾರೆ? 2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದರು. ಕುಮಾರಸ್ವಾಮಿ ಈ ಬಗ್ಗೆ ಏನು ಕೇಳಿದ್ದಾರೆ? 15ನೇ ಹಣಕಾಸು ಆಯೋಗದಡಿ ₹11,595 ಕೋಟಿ ಘೋಷಣೆ ಮಾಡಿದ್ದರು. ಎಲ್ಲಿ ಕೊಟ್ಟರು? ಇದನ್ನು ನೀವು ಕೇಳುವುದಿಲ್ಲ’ ಎಂದರು.

‘ಮಹಾರಾಷ್ಟ್ರ ಜನರನ್ನು ದಾರಿತಪ್ಪಿಸಿ ಮತಗಳಿಸಲು ಮಹಾರಾಷ್ಟ್ರ ಸರ್ಕಾರ ಸುಳ್ಳು ಜಾಹೀರಾತು ನೀಡಿದೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.