ADVERTISEMENT

ನೀತಿ ಸಂಹಿತೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣ ರದ್ದು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 16:00 IST
Last Updated 22 ನವೆಂಬರ್ 2024, 16:00 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಬೆಂಗಳೂರು: ‘ಲೋಕಸಭೆ ಚುನಾವಣೆ ವೇಳೆ ಮಾಡಲಾದ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ’ ಎಂದು ಆರೋಪದಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ಲಾಲ್‌ಜಿ ಆರ್‌.ಮೆಂಡನ್‌ ಮತ್ತು ತ್ರಿಶಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್‌.ಎಸ್‌.ಗೋಪಾಲಕೃಷ್ಣ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎಂ.ಅರುಣ್‌ ಶ್ಯಾಮ್‌, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 188ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರು ದಾಖಲಿಸುವ ಅಧಿಕಾರ ವ್ಯಾಪ್ತಿಯನ್ನು ಅಧಿಕಾರಿ ಹೊಂದಿಲ್ಲ. ದೂರು ದಾಖಲಿಸುವಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಈ ಖಾಸಗಿ ದೂರನ್ನು ರದ್ದುಪಡಿಸಬೇಕು’ ಎಂಬ ವಾದವನ್ನು ಮನ್ನಿಸಿದ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿತು.

ADVERTISEMENT

ಪ್ರಕರಣವೇನು?: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು, ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ 2024ರ ಮಾರ್ಚ್ 30ರಂದು ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

‘ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಲಾಗಿದೆ. ಭಾಷಣದಲ್ಲಿ; ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ವಿದ್ಯಾರ್ಥಿ ವೃಂದಕ್ಕೆ ಹಲವು ಉಚಿತ ಯೋಜನೆ ಜಾರಿಗೊಳಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ’ ಎಂಬ ಆರೋಪದಡಿ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ 2024ರ ಏಪ್ರಿಲ್ 4ರಂದು ಖಾಸಗಿ ದೂರು ದಾಖಲಿಸಿದ್ದರು.

ದೂರನ್ನು ಪರಿಗಣಿಸಿದ್ದ ನ್ಯಾಯಾಲಯ, ‘ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಬೇಕು’ ಎಂದು ಸ್ಥಳೀಯ ಠಾಣಾ ಪೊಲೀಸರಿಗೆ ನಿರ್ದೇಶಿಸಿತ್ತು. ಅಂತೆಯೇ, ಸಂಸದ ಕೋಟ ಶ್ರಿನಿವಾಸ ಪೂಜಾರಿ ಹಾಗೂ ಇತರ ಮೂವರು ಆರೋಪಿಗಳಿಗೆ ಸಮನ್ಸ್‌ ಜಾರಿಗೊಳಿಸಲು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.