ನವದೆಹಲಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ದ್ವೇಷ ಭಾಷಣ ಪ್ರಕರಣದಲ್ಲಿ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದಡಿ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿತ್ತು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರ ಪೀಠವು ಸಿಎಎಚ್‌ಎಸ್ (ದ್ವೇಷ ಭಾಷಣದ ವಿರುದ್ಧದ ಸಂಘಟನೆ) ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿತು.
‘ಕ್ಷಮಿಸಿ, ನಿಮ್ಮ ಮನವಿಯನ್ನು ಪರಿಗಣಿಸಲು ನಾವು ಒಲವು ತೋರುತ್ತಿಲ್ಲ. ನೀವು ಅರ್ಜಿ ಹಿಂಪಡೆಯಲು ಬಯಸಿದರೆ, ನೀವು ಹಾಗೆ ಮಾಡಬಹುದು’ ಎಂದು ಪೀಠ ಹೇಳಿತು. ಬಳಿಕ ಅರ್ಜಿದಾರರು ಅರ್ಜಿ ಹಿಂಪಡೆದರು. ಆದಾಗ್ಯೂ, ಆದೇಶವನ್ನು ಮಾರ್ಪಡಿಸುವಂತೆ ಕೋರಿ ಹೈಕೋರ್ಟ್‌ಗೆ ತೆರಳಲು ಅರ್ಜಿದಾರರಿಗೆ ಪೀಠವು ಸ್ವಾತಂತ್ರ್ಯ ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.