ADVERTISEMENT

ರಮೇಶ ಜಾರಕಿಹೊಳಿ ವಿರುದ್ಧದ ಪ್ರಕರಣ: ಬಲವಂತದ ಕ್ರಮ ಬೇಡ-ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 16:01 IST
Last Updated 9 ಫೆಬ್ರುವರಿ 2024, 16:01 IST
<div class="paragraphs"><p>ಶಾಸಕ ರಮೇಶ ಜಾರಕಿಹೊಳಿ</p></div>

ಶಾಸಕ ರಮೇಶ ಜಾರಕಿಹೊಳಿ

   

ಬೆಂಗಳೂರು: ‘ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಪಡೆದ ಸಾಲ ಮರುಪಾವತಿ ಮಾಡದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮಕ್ಕೆ ಮುಂದಾಗಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ರಮೇಶ ಜಾರಕಿಹೊಳಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ರಮೇಶ ಜಾರಕಿಹೊಳಿ ಪರ ವಕೀಲರು, ‘ಇದೇ 26ರಂದು ಅರ್ಜಿದಾರರ ಮಗನ ಮದುವೆ ನಿಶ್ಚಯವಾಗಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳು ಬಂಧಿಸುವ ಸಾಧ್ಯತೆಯಿದೆ. ಆದ್ದರಿಂದ, ಅವರಿಗೆ ರಕ್ಷಣೆ ನೀಡಬೇಕು’ ಎಂದು ಮನವಿ ಮಾಡಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಹಿಂದೂ ಧಾರ್ಮಿಕ ಸಂಪ್ರದಾಯಗಳ ಪ್ರಕಾರ ಮಗನ ಮದುವೆಯಲ್ಲಿ ತಂದೆ ಹಾಜರಿರುವುದು ಅತ್ಯಗತ್ಯ. ಅದ್ದರಿಂದ, ಮುಂದಿನ ವಿಚಾರಣೆಯವರೆಗೂ ರಮೇಶ ಜಾರಕಿಹೊಳಿ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗಬಾರದು’ ಎಂದು ತನಿಖಾಧಿಕಾರಿಗಳಿಗೆ ನಿರ್ದೇಶಿಸಿತು.

‘ಇದೇ ವೇಳೆ ಪ್ರಕರಣದ ಇತರೆ ಅರ್ಜಿದಾರರ ವಿರುದ್ಧ ತನಿಖೆ ನಡೆಸುವುದಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಪ್ರಕರಣವೇನು?: ಬೆಳಗಾವಿ ಜಿಲ್ಲೆ ಗೋಕಾಕದಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ ಜಾರಕಿಹೊಳಿ ಮತ್ತಿತರರು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ ನಿಂದ ಪಡೆದಿದ್ದ ₹ 329 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ.

ಈ ಸಂಬಂಧ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಜನವರಿ 5ರಂದು ನೀಡಿದ ದೂರಿನ ಅನ್ವಯ ವಿ.ವಿ. ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಕಲಂ 406, 420ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.