ADVERTISEMENT

ಜೆ.ಪಿ.ನಡ್ಡಾ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2024, 14:30 IST
Last Updated 7 ನವೆಂಬರ್ 2024, 14:30 IST
<div class="paragraphs"><p>ಜೆ. ಪಿ. ನಡ್ಡಾ </p></div>

ಜೆ. ಪಿ. ನಡ್ಡಾ

   

ಬೆಂಗಳೂರು: ‘ಬಿಜೆಪಿಗೆ ಮತ ನೀಡಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದಿಂದ ಕರ್ನಾಟಕವು ವಂಚಿತವಾಗದಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

‘ನನ್ನ ವಿರುದ್ಧದ ಎಫ್‌ಐಆರ್‌ ಮತ್ತು ಹಾವೇರಿ ಜಿಲ್ಲಾ ಪ್ರಧಾನ ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣದ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಜೆ.ಪಿ.ನಡ್ಡಾ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಗುರುವಾರ ಪುರಸ್ಕರಿಸಿ ಆದೇಶಿಸಿದರು.

ADVERTISEMENT

ನಡ್ಡಾ ‍ಪರ ಹೈಕೋರ್ಟ್‌ ವಕೀಲ ಎಂ.ವಿನೋದ್‌ ಕುಮಾರ್‌, ‘ಭಾಷಣದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇಡೀ ಭಾಷಣವನ್ನು ಪರಿಶೀಲಿಸಿದಾಗ ಅದರಲ್ಲಿ ಐಪಿಸಿ ಕಲಂ 171ಸಿ (ಚುನಾವಣೆಯ ಮೇಲೆ ಪ್ರಭಾವ ಬೀರುವುದು) ಮತ್ತು 171ಎಫ್‌ (ಚುನಾವಣೆಯ ಮೇಲೆ ಪ್ರಭಾವ ಬೀರಿದ್ದಕ್ಕೆ ಶಿಕ್ಷೆ) ಅಡಿ ಯಾವುದೇ ಅಪರಾಧ ಕಾಣಸಿಗುವುದಿಲ್ಲ. ಆದ್ದರಿಂದ, ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣ ರದ್ದುಗೊಳಿಸಿ ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.