ADVERTISEMENT

ಜಾತಿ ನಿಂದನೆ: ಬಿಜೆಪಿ ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 23:54 IST
Last Updated 19 ಸೆಪ್ಟೆಂಬರ್ 2024, 23:54 IST
ಮುನಿರತ್ನ, ಶಾಸಕ
ಮುನಿರತ್ನ, ಶಾಸಕ   

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯರೊಬ್ಬರ ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಬಿಬಿಎಂಪಿ ಮಾಜಿ ಸದಸ್ಯ ವೇಲುನಾಯ್ಕರ್‌ ನೀಡಿದ್ದ ದೂರಿನ ಅನ್ವಯ ವೈಯಾಲಿಕಾವಲ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಆರೋಪ  ಪ್ರಕರಣದಲ್ಲಿ ಜಾಮೀನು ಕೋರಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು.

‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಗುರುವಾರ ತೀರ್ಪು ಪ್ರಕಟಿಸಿದರು. ‘₹2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ಮತ್ತು ಇಬ್ಬರ ಭದ್ರತೆ ಒದಗಿಸಬೇಕು. ಸಾಕ್ಷ್ಯ ನಾಶ ಮಾಡುವ ಪ್ರಯತ್ನ ಮಾಡಬಾರದು’ ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಮುನಿರತ್ನ ಪರ ಹೈಕೋರ್ಟ್‌ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.