ಬೆಂಗಳೂರು: ‘ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ, ‘ಜಾಗೃತ ಕರ್ನಾಟಕ–ಜಾಗೃತ ಭಾರತ‘ ಸಂಘಟನೆ ಅಧ್ಯಕ್ಷ ಕೆ.ಎನ್.ಮಂಜುನಾಥ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
‘ಇದು ಅಂತರರಾಜ್ಯ ನದಿ ನೀರು ಹಂಚಿಕೆ ವಿಚಾರವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ನದಿ ನೀರು ವ್ಯಾಜ್ಯ ಕಾಯ್ದೆ–1956ರ ಅನ್ವಯ ಹೈಕೋರ್ಟ್ ಯಾವುದೇ ಆದೇಶ ನೀಡಲಾಗದು. ಸುಪ್ರೀಂಕೋರ್ಟ್ ಮಾತ್ರವೇ ಇಂತಹ ಅರ್ಜಿಗಳ ವಿಚಾರಣೆ ನಡೆಸಿ ಅದೇಶ ನೀಡಬಹುದಾಗಿದೆ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ‘ಅರ್ಜಿದಾರರು ಬೇಕಿದ್ದರೆ ಪರ್ಯಾಯ ವೇದಿಕೆಗಳಲ್ಲಿ ಪರಿಹಾರ ಕಂಡುಕೊಳ್ಳಬಹುದು‘ ಎಂದು ಸೂಚಿಸಿ ಅರ್ಜಿ ವಿಲೇವಾರಿ ಮಾಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.