ADVERTISEMENT

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ: ವರ್ಮಾನಿಂದ ₹ 8.21 ಕೋಟಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 23:30 IST
Last Updated 12 ಜೂನ್ 2024, 23:30 IST
<div class="paragraphs"><p>ವಾಲ್ಮೀಕಿ ನಿಗಮ</p></div>

ವಾಲ್ಮೀಕಿ ನಿಗಮ

   

ಚಿತ್ರ ಕೃಪೆ: ಕರ್ನಾಟಕ ಸರ್ಕಾರ ವೆಬ್‌ಸೈಟ್‌

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಆರೋಪಿ ಸತ್ಯನಾರಾಯಣ್‌ ವರ್ಮಾ ಎಂಬಾತನನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಹೈದರಾಬಾದ್‌ನಲ್ಲಿ ಬಂಧಿಸಿದ್ದು, ಆತನಿಂದ ₹ 8.21 ಕೋಟಿ ನಗದು ಜಪ್ತಿ ಮಾಡಿದ್ದಾರೆ.

ADVERTISEMENT

‘ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಇದೇ ಪುರಾವೆ ಆಧರಿಸಿ ವರ್ಮಾನನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದ್ದು, ಅಧಿಕಾರಿಗಳ ತಂಡ ಆತನನ್ನು ನಗರಕ್ಕೆ ಕರೆತರುತ್ತಿದೆ’ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಸತ್ಯನಾರಾಯಣ್‌ ವರ್ಮಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನು ಕೋರಲಾಗುವುದು. ಈತನ ವಿಚಾರಣೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದು ಹೇಳಿದರು.

‘ಆರೋಪಿ ವರ್ಮಾ, ರಾಜ್ಯದ ಹಲವು ಅಧಿಕಾರಿಗಳು ಹಾಗೂ ರಾಜಕಾರಣಿಗಳ ಜೊತೆ ಒಡನಾಟ ಇಟ್ಟುಕೊಂಡಿದ್ದನೆಂಬ ಮಾಹಿತಿ ಇದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿಕೊಂಡು, ಅನ್ಯ ಉದ್ದೇಶಕ್ಕೆ ಬಳಸಿಕೊಂಡು ಲಾಭ ಮಾಡಿಕೊಳ್ಳುವ ಕೃತ್ಯದಲ್ಲಿ ಈತ ತೊಡಗಿದ್ದನೆಂಬ ಶಂಕೆ ಇದೆ’ ಎಂದು ತಿಳಿಸಿದರು.

ಎಂ.ಜಿ. ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ 18 ಖಾತೆಗಳಿಗೆ ₹ 94.73 ಕೋಟಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ.

ಈ ಅಕ್ರಮ ಹಣ ವರ್ಗಾವಣೆ ಸಂಬಂಧ ಈಗಾಗಲೇ ತನಿಖೆಗೆ ಇಳಿದಿರುವ ಎಸ್‌ಐಟಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್‌, ಮಾಜಿ ಸಚಿವ ಬಿ.ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್‌ ನೆಕ್ಕುಂಟಿ, ನಾಗೇಶ್ವರ್‌ ರಾವ್‌ ಎಂಬುವವರನ್ನು ಬಂಧಿಸಿದೆ. ಇದೇ ಪ್ರಕರಣದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ಬಿ. ನಾಗೇಂದ್ರ ತಮ್ಮ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ.

ಸಿಬಿಐ ತನಿಖೆ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು, ಪ್ರಕರಣ ಸಂಬಂಧ ಪುರಾವೆಗಳನ್ನು ಸಂಗ್ರಹಿಸುತ್ತಿದ್ದಾರೆ. ಸದ್ಯದಲ್ಲೇ ಕೆಲ ಸ್ಥಳಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.