ಬೆಂಗಳೂರು: ‘ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಕುರಿತಂತೆ ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾವವನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.
ಈ ಕುರಿತ ಕೇಂದ್ರ ಗೃಹ ಇಲಾಖೆ 2018ರ ನವೆಂಬರ್ 13ರಂದು ರಾಜ್ಯ ಸರ್ಕಾರಕ್ಕೆ ತಿಳಿಸಿರುವ ಪತ್ರವನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.
ಲಿಂಗಾಯತರಿಗೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತ ಆಯೋಗವು ತಜ್ಞರ ಸಮಿತಿ ರಚನೆಗೆ ಆದೇಶ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ನಾಲ್ಕು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಲೇವಾರಿ ಮಾಡಿದೆ.
ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ಕೇಂದ್ರದ ಆದೇಶವನ್ನು ಮೆಮೊ (ಜ್ಞಾಪನಾ ಪತ್ರ) ಮೂಲಕ ನ್ಯಾಯಪೀಠಕ್ಕೆ ಸಲ್ಲಿಸಿದರು.
ಒಪ್ಪದೇ ಇರಲು ಕಾರಣಗಳೇನು?:
* ಲಿಂಗಾಯತ-ವೀರಶೈವರು ಹಿಂದೂ ಧರ್ಮದ ಅವಿಭಾಜ್ಯ ಅಂಗ.
* ಈ ಅಂಶ ಈಗಾಗಲೇ 1871 ರ ಮೊದಲ ಜನಗಣತಿ ವೇಳೆಯಲ್ಲಿ ವೇದ್ಯವಾಗಿದೆ.
* ಒಂದು ವೇಳೆ ಶಿಫಾರಸು ಮಾನ್ಯ ಮಾಡಿದರೆ ಈಗಾಗಲೇ ಲಿಂಗಾಯತ-ವೀರಶೈವ ಪಂಗಡದಲ್ಲಿ ಪರಿಶಿಷ್ಟ ಜಾತಿ ಸೌಲಭ್ಯ ಪಡೆಯುತ್ತಿರುವವರು ಅದರಿಂದ ವಂಚಿತರಾಗುತ್ತಾರೆ.
ಈ ಅಂಶಗಳು ಪ್ರಸ್ತಾವ ಒಪ್ಪದಿರಲು ಕೇಂದ್ರ ಗೃಹ ಇಲಾಖೆ ನೀಡಿರುವ ಕಾರಣಗಳಾಗಿವೆ. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.
ಏನಿದು ಪ್ರಕರಣ?:
ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ 2017ರ ಡಿಸೆಂಬರ್ 22ರಂದು ರಾಜ್ಯ ಅಲ್ಪಸಂಖ್ಯಾತ ಆಯೋಗವು ತಜ್ಞರ ಸಮಿತಿ ರಚನೆಗೆ ಆದೇಶಿಸಿದ್ದ ಕ್ರಮವನ್ನು ಅರ್ಜಿದಾರರು ಪ್ರಶ್ನಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.