ADVERTISEMENT

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ: ಮೈತ್ರಿ ಅಭ್ಯರ್ಥಿಯಾಗಲು ಯೋಗೇಶ್ವರ ಕಸರತ್ತು

​ಪ್ರಜಾವಾಣಿ ವಾರ್ತೆ
Published 10 ಜೂನ್ 2024, 16:33 IST
Last Updated 10 ಜೂನ್ 2024, 16:33 IST
ಯೋಗೇಶ್ವರ 
ಯೋಗೇಶ್ವರ    

ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಲು ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ ಪ್ರಯತ್ನ ಆರಂಭಿಸಿದ್ದಾರೆ. ಒಂದು ವೇಳೆ, ಈ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. 

ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಅವರು ಬಿಜೆಪಿಯ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧಿಸಿದ್ದ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಯೋಗೇಶ್ವರ ಅವರನ್ನು 15 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಜಯ ಗಳಿಸಿದ್ದಾರೆ. ಕೇಂದ್ರ ಸಚಿವರಾಗಿದ್ದಾರೆ. ಶಾಸಕ ಸ್ಥಾನಕ್ಕೆ 14 ದಿನಗಳ ಒಳಗೆ ಅವರು ರಾಜೀನಾಮೆ ನೀಡಬೇಕಿದೆ. ಶೀಘ್ರದಲ್ಲಿ ಉಪಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇದೆ. 

ADVERTISEMENT

ಉಪ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್‌ ಮೈತ್ರಿ ಇರುತ್ತದೆ. ಜೆಡಿಎಸ್‌ ಶಾಸಕರಿದ್ದ ಈ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟರೆ ವಿಧಾನಸಭೆಯಲ್ಲಿ ಪಕ್ಷದ ಬಲ ಕುಸಿಯುತ್ತದೆ. ಆ ಕಾರಣದಿಂದ ಜೆಡಿಎಸ್‌ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು. ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರೇ ಅಭ್ಯರ್ಥಿಯಾಗಬೇಕು ಎಂಬ ಚರ್ಚೆ ಜೆಡಿಎಸ್‌ನಲ್ಲಿ ಆರಂಭವಾಗಿದೆ. 

‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಡಾ.ಸಿ.ಎನ್‌.ಮಂಜುನಾಐ್ ಅವರ ಗೆಲುವಿನಲ್ಲಿ ಬಿಜೆಪಿ ನಾಯಕರ ಪಾತ್ರ ದೊಡ್ಡದು. ಈ ಮೂಲಕ ಎಚ್‌.ಡಿ.ದೇವೇಗೌಡರ ಕುಟುಂಬಕ್ಕೆ ಶಕ್ತಿ ತುಂಬಿದ್ದೇವೆ. ಹೀಗಾಗಿ, ಜೆಡಿಎಸ್‌ನವರು ಈ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಬಿಜೆಪಿ ವರಿಷ್ಠರು ಕುಮಾರಸ್ವಾಮಿ ಮನವೊಲಿಸಬೇಕು’ ಎಂದು ಪಕ್ಷದ ಹಿರಿಯ ನಾಯಕರ ಗಮನಕ್ಕೆ ಯೋಗೇಶ್ವರ ತಂದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.