ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್, ಮೈತ್ರಿ ಪಕ್ಷಗಳಾದ ಬಿಜೆಪಿ–ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯ ನ. 23ರಂದು ನಡೆಯಲಿದ್ದು, ಮೂರೂ ಪಕ್ಷಗಳ ಸಾಮರ್ಥ್ಯ ಏನೆಂಬುದು ಗೊತ್ತಾಗಲಿದೆ.
ಮೂರೂ ಕ್ಷೇತ್ರಗಳಿಗೆ ನ. 13ರಂದು ಮತದಾನ ನಡೆದಿತ್ತು. ಆಯಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಬೆಳಿಗ್ಗೆ 8ರಿಂದ ಆರಂಭವಾಗಲಿದೆ. ಎಲ್ಲ ಕೇಂದ್ರಗಳಲ್ಲಿಯೂ ಮತ ಎಣಿಕೆಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವಿಎಂ ಯಂತ್ರಗಳಲ್ಲಿ ಚಲಾವಣೆಯಾದ ಮತಗಳ ಎಣಿಕೆಗೂ ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನೆರವೇರಲಿದೆ. ಕಡಿಮೆ ಅಭ್ಯರ್ಥಿಗಳಿರುವ ಸಂಡೂರು, ಶಿಗ್ಗಾವಿ ಕ್ಷೇತ್ರದ ಫಲಿತಾಂಶ ಬಹುಬೇಗ ದೊರಕಬಹುದು. ಅತಿ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದ ಚನ್ನಪಟ್ಟಣ ಕ್ಷೇತ್ರದ ಫಲಿತಾಂಶ ಮಧ್ಯಾಹ್ನದ ವೇಳೆಗೆ ಸಿಗುವ ನಿರೀಕ್ಷೆ ಇದೆ.
ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ 14 ಟೇಬಲ್‌ಗಳ ವ್ಯವಸ್ಥೆಯಾಗಿದ್ದರೆ, ಚನ್ನಪಟ್ಟಣ ಕ್ಷೇತ್ರದ ಎಣಿಕೆ ಕಾರ್ಯಕ್ಕೆ 15 ಟೇಬಲ್‌ಗಳ ವ್ಯವಸ್ಥೆಯಾಗಿದೆ. ಶಿಗ್ಗಾವಿ ಕೇಂದ್ರದಲ್ಲಿ 57, ಸಂಡೂರಿನಲ್ಲಿ 62 ಹಾಗೂ ಚನ್ನಪಟ್ಟಣದಲ್ಲಿ 93 ಸಿಬ್ಬಂದಿ ಮತ ಎಣಿಕೆ ಕಾರ್ಯ ನಡೆಸಲಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಬಿಜೆಪಿಯ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ನ ಇ. ತುಕಾರಾಂ ಹಾಗೂ ಜೆಡಿಎಸ್‌ನ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕಾರಣ ಈ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಈ ಮೂರೂ ಕ್ಷೇತ್ರಗಳಲ್ಲೂ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಇತ್ತು. ಸಂಡೂರು (ಕಾಂಗ್ರೆಸ್), ಶಿಗ್ಗಾವಿ (ಬಿಜೆಪಿ), ಚನ್ನಪಟ್ಟಣ (ಜೆಡಿಎಸ್) ಕ್ಷೇತ್ರವನ್ನು ತಮ್ಮಲ್ಲೇ ಉಳಿಸಿಕೊಳ್ಳಲು ಮೂರೂ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿದ್ದವು.
ಕಾಂಗ್ರೆಸ್ ಅಭ್ಯರ್ಥಿಗಳ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಭರ್ಜರಿ ಪ್ರಚಾರ ನಡೆಸಿದರು. ಶಿಗ್ಗಾವಿ ಮತ್ತು ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಲ್ಹಾದ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ ಪ್ರಮುಖರು ಮತ ಯಾಚನೆ ನಡೆಸಿದ್ದರು.
ಚನ್ನಪಟ್ಟಣದಲ್ಲಿ ಪ್ರಚಾರದ ಅಬ್ಬರ ಜೋರಾಗಿತ್ತು. ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವಿನ ಕದನ ಎಂಬಂತೆ ಈ ಕ್ಷೇತ್ರದ ಉಪ ಚುನಾವಣೆ ಬಿಂಬಿತಗೊಂಡಿದ್ದರಿಂದ ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿತ್ತು. ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಜತೆಗೆ ಬಿಜೆಪಿ ನಾಯಕರು ಪ್ರಚಾರದಲ್ಲಿ ಭಾಗಿಯಾದರು. ಶಿವಕುಮಾರ್ ಜತೆಗೆ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.