ADVERTISEMENT

ಚಿಲುಮೆ: ಪರಪ್ಪನ ಅಗ್ರಹಾರ ಜೈಲು ಸೇರಿದ ಬಿಬಿಎಂಪಿ ಅಧಿಕಾರಿಗಳು

ಮತ್ತಷ್ಟು ಅಧಿಕಾರಿಗಳಿಗೆ ನೋಟಿಸ್ ನೀಡುವ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 18:19 IST
Last Updated 29 ನವೆಂಬರ್ 2022, 18:19 IST
   

ಬೆಂಗಳೂರು: ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲಾಗಿರುವ ಬಿಬಿಎಂಪಿಯ ನಾಲ್ವರು ಅಧಿಕಾರಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸದ್ಯ ಅವರೆಲ್ಲ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.

ಮತದಾರರ ವೈಯಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಪ್ರಕರಣದಲ್ಲಿ
ಚಿಲುಮೆ ಸಂಸ್ಥೆಗೆ ಸಹಾಯ ಮಾಡಿದ್ದ ಆರೋಪದಡಿ ನಾಲ್ವರನ್ನೂ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂರು ದಿನ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ, ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ನಾಲ್ವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

‘ಬಿಬಿಎಂಪಿ ಕಂದಾಯ ಅಧಿಕಾರಿಗಳಾದ ಸುಹೇಲ್‌ ಅಹಮದ್‌, ಕೆ.ಚಂದ್ರಶೇಖರ್‌, ಮಹೇಶ್‌ ಹಾಗೂ ಉಪ ಕಂದಾಯ ಅಧಿಕಾರಿ ವಿ.ಬಿ. ಭೀಮಾಶಂಕರ್‌ ಅವರನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ. ಅದರನ್ವಯ ತನಿಖೆ ಮುಂದುವರಿದಿದ್ದು, ಮತ್ತಷ್ಟು ಅಧಿಕಾರಿಗಳಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ADVERTISEMENT

ಉದ್ಯೋಗಿ ಮಾರುತಿ ಗೌಡ ವಿಚಾರಣೆ: ‘ಚಿಲುಮೆ ಸಂಸ್ಥೆಯ ಉದ್ಯೋಗಿ ಮಾರುತಿ ಗೌಡ ಎಂಬುವರನ್ನು ವಿಚಾರಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಅವರ ಬೆಂಗಳೂರಿನ ಮನೆ ಮೇಲೆ ದಾಳಿ ಮಾಡಲಾಗಿತ್ತು. ರವಿಕುಮಾರ್‌ ಅವರಿಗೆ ಸೇರಿದ್ದ ದಾಖಲೆಗಳು, ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿತ್ತು. ಇವುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪುರಾವೆ ಸಿಕ್ಕರೆ ವಿಚಾರಣೆ: ‘ಮತದಾರರ ಮಾಹಿತಿ ಕಳವು ಪ್ರಕರಣ ಗಂಭೀರವಾಗಿದ್ದು, ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ. ವಿಚಾರಣೆ ನೆಪದಲ್ಲಿ ಯಾರಿಗೂ ಕಿರುಕುಳ ನೀಡುತ್ತಿಲ್ಲ. ಪುರಾವೆ ಸಿಕ್ಕರಷ್ಟೇ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಸುದ್ದಿಗಾರರಿಗೆ ಮಾಹಿತಿ ನೀಡಿದರು.

‘ವಿಚಾರಣೆ ನೆಪದಲ್ಲಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ’ ಎಂಬ ಬಿಬಿಎಂಪಿ ಅಧಿಕಾರಿಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ತಪ್ಪು ಮಾಡಿದವರು ಭಯ ಪಡಬೇಕು. ತಪ್ಪು ಮಾಡದವರು ಏಕೆ ಭಯಪಡಬೇಕು. ಕಾನೂನು ಪ್ರಕಾರವೇ ಕ್ರಮ ಜರುಗಿಸಲಾಗುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.