ಬೆಂಗಳೂರು: ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಬುಧವಾರ ತನ್ನ ಆದೇಶವನ್ನು ಪ್ರಕಟಿಸಿತು.
‘ಆರೋಪಿಯು ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಿಸಬಾರದು. ₹ 2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷಿಗಳನ್ನು ಬೆದರಿಸಬಾರದು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ಜಾಮೀನು ಮಂಜೂರಾತಿ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳಬಾರದು. ನ್ಯಾಯಾಲಯದ ಈ ಷರತ್ತುಗಳನ್ನು ಉಲ್ಲಂಘಿಸಿದರೆ, ಜಾಮೀನು ತಂತಾನೇ ರದ್ದಾಗಲಿದೆ‘ ಎಂದು ನ್ಯಾಯಪೀಠ ಹೇಳಿದೆ. ಶರಣರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.
ಪ್ರಕರಣವೇನು?: ‘ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ ನಂತರ 2022ರ ಸೆಪ್ಟೆಂಬರ್ 1ರಂದು ಅವರನ್ನು ಬಂಧಿಸಲಾಗಿತ್ತು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012, ಭಾರತೀಯ ದಂಡ ಸಂಹಿತೆ–1860, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ–2015ರ ವಿವಿಧ ಕಲಂಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಎರಡನೇ ಪ್ರಕರಣ: ಮೊದಲ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪೋಕ್ಸೊ ಪ್ರಕರಣ ಶರಣರ ವಿರುದ್ಧ ದಾಖಲಾಗಿದ್ದು ಇದರಲ್ಲಿ ಶರಣರ ವಿರುದ್ಧ ಬಾಡಿ ವಾರಂಟ್ ಹೊರಡಿಸಲಾಗಿತ್ತು. ಇದೀಗ ಈ ಪ್ರಕರಣದಲ್ಲೂ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇದಿನ್ನೂ ವಿಚಾರಣೆಗೆ ಬರಬೇಕಿದೆ. ಏತನ್ಮಧ್ಯೆ, ಈ ಕುರಿತಂತೆ ಪ್ರತಿಕ್ರಿಯಿಸಿದ ವಕೀಲ ಸಂದೀಪ್ ಎಸ್.ಪಾಟೀಲ್, ’ಈಗಾಗಲೇ ಜಾಮೀನು ದೊರೆತಿರುವ ಕಾರಣ ಶರಣರ ಬಿಡುಗಡೆಗೆ ಎರಡನೇ ಎಫ್‌ಐಆರ್ ಅಡ್ಡಿಯಾಗುವುದಿಲ್ಲ‘ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.