ಶಿವಮೊಗ್ಗ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗುವುದು. ಪ್ರಕರಣದ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಿಕ್ಕಮಗಳೂರು ಜಿಲ್ಲೆ ತರೀಕೆರೆಗೆ ತೆರಳುವ ಮಾರ್ಗದಲ್ಲಿ ಸೋಮವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನೇಹಾ ಕುಟುಂಬದ ಪರವಾಗಿ ಸರ್ಕಾರ ಇದೆ. ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಎಚ್.ಕೆ.ಪಾಟೀಲ, ಸಂತೋಷ ಲಾಡ್ ನೇಹಾ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ' ಎಂದರು.
ಜಾತ್ಯತೀತ ಶಕ್ತಿಗಳ ಮತ ವಿಭಜನೆ ಆಗದಂತೆ ತಡೆಯಲು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮನವಿ ಮಾಡಿದ್ದೇನೆ. ಅವರು ಸ್ಪಂದಿಸುವ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ಹೊಂದಾಣಿಕೆಯಾಗಿದೆ ಎಂಬ ಕೆ.ಎಸ್.ಈಶ್ವರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿದ್ದರಾಮಯ್ಯ, 'ಈಶ್ವರಪ್ಪನಿಗೆ ಮೆದುಳಿಗೂ ನಾಲಿಗೆಗೂ ಲಿಂಕ್ ತಪ್ಪಿದೆ' ಎಂದು ಪುನರುಚ್ಚರಿಸಿದರು. ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ನಿಂದ ದೇಶದ ಭದ್ರತೆಗೆ ಅಪಾಯ ಎಂದು ಬಿಜೆಪಿ ಮಾಧ್ಯಮಗಳಿಗೆ ಕೊಟ್ಟಿರುವ ಜಾಹೀರಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಮತಕ್ಕಾಗಿ ಕೋಮು ಧ್ರುವೀಕರಣದ ರಾಜಕೀಯ ಮಾಡುತ್ತಿರುವ ಬಿಜೆಪಿಯಿಂದಲೇ ದೇಶದ ಭದ್ರತೆಗೆ ಅಪಾಯವಿದೆ' ಎಂದು ತಿರುಗೇಟು ನೀಡಿದರು.
ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.