ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ (82) ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ರಾಜ್ಯ ನಾಯಕರು ಕಂಬನಿ ಮಿಡಿದಿದ್ದಾರೆ.
‘ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
‘ತಮ್ಮ ಪ್ರವಚನಗಳ ಮೂಲಕ ಕೋಟ್ಯಂತರ ಜನರಿಗೆ ಜ್ಞಾನದಾಸೋಹ ನೀಡಿದ ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶರಾದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ. ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಕ್ತರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
’ಜ್ಞಾನಯೋಗಾಶ್ರಮದ ಪೀಠಾಧೀಶರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಿಬಾರದ ನಷ್ಟ. ಸಿದ್ದೇಶ್ವರ ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ಮತ್ತು ಭಕ್ತವೃಂದಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮಾಜಿ ಸಿ.ಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
’ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ. ಸಮಾಜಕ್ಕೆ ಚಿಕಿತ್ಸರಾಗಿದ್ದ ಪೂಜ್ಯರು, ತಮ್ಮ ಪರಿಪೂರ್ಣ ಸಾರ್ಥಕ ಬದುಕಿನಿಂದಲೇ ನಮ್ಮನ್ನು ಪಾವನಗೊಳಿಸಿದವರು. ತಮ್ಮ ಪ್ರತಿ ಹೆಜ್ಜೆಯಲ್ಲೂ ಜ್ಞಾನದ ಬೆಳಕು ಮೂಡಿಸುತ್ತಿದ್ದ ಅವರ ನಿರ್ಗಮನ ಬಹುದೊಡ್ಡ ನಷ್ಟ. ಪೂಜ್ಯರು ಬಿಟ್ಟುಹೋಗಿರುವ ಅರಿವು ನಮಗೆಲ್ಲ ದಿವ್ಯಬೆಳಕು. ಆ ಬೆಳಕಿನಡಿಯಲ್ಲಿ ಮುನ್ನಡೆಯೋಣ ಎನ್ನುವ ಆಶಯ ನನ್ನದಾಗಿದೆ’ ಎಂದು ಮಾಜಿ ಸಿ.ಎಂ ಎಚ್.ಡಿ.ಕುಮಾರಸ್ವಾಮಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
‘ಖ್ಯಾತ ಪ್ರವಚನಕಾರರು ಹಾಗೂ ಜ್ಞಾನಕೋಶವೆಂದೇ ಪ್ರಸಿದ್ಧರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ಕೇಳಿ ಅತೀವ ನೋವುಂಟಾಯಿತು. ಅವರ ಸಾವು ತುಂಬಲಾಗದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರ ಅಪಾರ ಭಕ್ತರಿಗೆ ನನ್ನ ಸಂತಾಪಗಳು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.