ಬೆಂಗಳೂರು: ರಾಜ್ಯದಲ್ಲಿರುವ ಸುಮಾರು 45 ಲಕ್ಷ ರೈತರ ಮನೆ ಬಾಗಿಲಿಗೆ ಉಚಿತವಾಗಿ ಪಹಣಿ ಮತ್ತು ಇತರ ದಾಖಲೆಗಳನ್ನು ಜನವರಿ 26ರಂದು ತಲುಪಿಸಲು ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿವಿಧೆಡೆ 50–60 ವರ್ಷಗಳಿಂದ ಇನಾಂ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಲ ಪಡೆಯುವುದು ಕಷ್ಟಕರವಾಗಿ ಪರಿಣಮಿಸಿದೆ. ಸೂಕ್ತ ದಾಖಲೆಗಳಿಲ್ಲದೆ, ತಿಳಿವಳಿಕೆ ಕೊರತೆಯಿಂದ ಅನೇಕ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಉಚಿತವಾಗಿ ಅವರಿಗೆ ದಾಖಲೆಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ದಶಕಗಳಿಂದ ಇನಾಂ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಬೆಳೆ ಪರಿಹಾರ, ಇತರ ಸೌಲಭ್ಯಗಳು ತಲುಪುತ್ತಿಲ್ಲ. ಇದಕ್ಕಾಗಿ ಮನೆ ಬಾಗಿಲಿಗೆ ಸೇವೆ ಒದಗಿಸಲಾಗುವುದು. ಜನವರಿ 26ರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ನಿರ್ದಿಷ್ಟ ಹಳ್ಳಿಗೆ ತೆರಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ರಾಜ್ಯದಾದ್ಯಂತ ಅಧಿಕಾರಿಗಳು ಪಹಣಿ ಹಾಗೂ ಇತರ ದಾಖಲೆಗಳನ್ನು ಉಚಿತವಾಗಿ ವಿತರಿಸಲಿದ್ದಾರೆ. ಒಂದೇ ದಿನ ದಾಖಲೆ ವಿತರಣೆ ಕಾರ್ಯಕ್ರಮ ಪೂರ್ತಿಗೊಳಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ರಾಜ್ಯ ವಿವಿಧೆಡೆ ಇನಾಂ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಪಹಣಿ ನೀಡುವ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಇನ್ನೂ ಒಂದು ವರ್ಷ ಮುಂದುವರಿಸಲು ಡಿಸೆಂಬರ್ 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.