ಬೆಂಗಳೂರು: ಎತ್ತಿನಹೊಳೆ ಯೋಜನೆಯ ಮೊದಲ ಹಂತದಲ್ಲಿ ಜುಲೈ ಕೊನೆಯೊಳಗೆ ವೇದಾವತಿ ಕಣಿವೆಗೆ ನೀರು ಹರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ ₹9,003.86 ಕೋಟಿ ವೆಚ್ಚವಾಗಿದೆ. ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲೇಬೇಕು ಎಂದ ಅವರು, ಈ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6,557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿಯಿದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚಿಸಲಾಗಿದ್ದು, ಶೀಘ್ರವೇ ಅನುಮೋದನೆ ನೀಡಲು ಕೋರಲಾಗಿದೆ. ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
ಈ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ ₹2,362.62 ಕೋಟಿಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ. ಈ ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದರು
ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪ ದೋಷಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.