ಬೆಂಗಳೂರು: ಜ್ವರ, ನಿಶ್ಯಕ್ತಿ, ಆಯಾಸದಿಂದ ಬಳಲುತ್ತಿದ್ದ ಜೆಡಿಎಸ್ ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಜಯನಗರದ ಅಪೊಲೊ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಹಾರೈಸಿದ್ದಾರೆ.
‘ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಅದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಆರೋಗ್ಯ ವಿಚಾರಿಸಿದ್ದೇನೆ’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರು ಅಪೊಲೊ ಆಸ್ಪತ್ರೆಗೆ ಇಂದು ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. 2 ದಿನಗಳ ವಿಶ್ರಾಂತಿಯ ನಂತರ ಮನೆಗೆ ಕಳುಹಿಸಲಾಗುವುದು ಎಂದು ವೈದ್ಯ ಡಾ.ಪಿ.ಸತೀಶ್ ಚಂದ್ರ ಮಾಹಿತಿ ನೀಡಿದ್ದಾರೆ.
‘ವಿದೇಶದಿಂದ ಮರಳಿದ ನಂತರ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಜ್ವರದ ಕಾರಣ ಆಸ್ಪತ್ರೆಗೆ ಕರೆತಂದೆವು ಎಂದು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.