ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ಬಿಜೆಪಿ–ಜೆಡಿಎಸ್ ಹಾಗೂ ರಾಜ್ಯಪಾಲರು ಸೇರಿ ನಡೆಸಿರುವ ಷಡ್ಯಂತ್ರ ಎಂದು ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಭಾನುವಾರ ಬೆಂಬಲಿಗರು ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರೊಂದಿಗೆ ಬಂದು ಬಾಗಿನ ಅರ್ಪಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಡಾ ವಿಚಾರದಲ್ಲಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಜ್ಯದ ಆರು ಕೋಟಿ ಜನರ ಆಶೀರ್ವಾದ ಅವರ ಮೇಲಿದೆ. ನಮ್ಮೆಲ್ಲರ (ಶಾಸಕರು–ಸಚಿವರು) ಬೆಂಬಲವೂ ಅವರಿಗೆ ಇದೆ ಎಂದರು.
ಜಲಾಶಯ ಭರ್ತಿಗೆ ಹರ್ಷ: ಮಧ್ಯ ಕರ್ನಾಟಕದ ಜೀವನಾಡಿ ಭದ್ರಾ ಜಲಾಶಯ ಈ ವರ್ಷ ಭರ್ತಿ ಆಗಿದೆ. ಕಳೆದ ವರ್ಷ ಮಳೆ ಕೊರತೆಯಿಂದ ಜಲಾಶಯದಲ್ಲಿ ನೀರು ಇಲ್ಲದೇ ಒಂದು ಬೆಳೆಗೆ ನೀರು ಹರಿಸಲಾಗಿತ್ತು. ಆದರೆ ಈ ಬಾರಿ ಎರಡು ಬೆಳೆಗೆ ನೀರು ಕೊಡಬಹುದು. ರೈತಾಪಿ ವರ್ಗಕ್ಕೆ ಒಳ್ಳೆಯದಾಗಲಿ. ಉತ್ತಮ ಬೆಳೆ ಬೆಳೆದು ಅದಕ್ಕೆ ಹೆಚ್ಚಿನ ಬೆಲೆ ಸಿಗಲಿ ಎಂದು ಆಶಿಸಿದರು.
ಬಾಗಿನ ಬಿಡುವ ವೇಳೆ ಪತ್ನಿ, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.