ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾತ್ರಿ ಇಂಧನ ಸಚಿವ ಕೆ.ಜೆ. ಜಾರ್ಜ್ ನಿವಾಸಕ್ಕೆ ತೆರಳಿ ಸುಮಾರು ಎರಡು ತಾಸು ಚರ್ಚೆ ನಡೆಸಿದ್ದಾರೆ.
ಮುಡಾ ನಿವೇಶನ ಹಂಚಿಕೆಯಲ್ಲಿ ಅಧಿಕಾರ ದುರ್ಬಳಕೆ ಆರೋಪದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಕುರಿತಂತೆ ರಾಜ್ಯಪಾಲರು ವಿವರಣೆ ಕೇಳಿರುವ ವಿಚಾರ ಗುರುವಾರ ಮಧ್ಯಾಹ್ನ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ. ಹೀಗಾಗಿ, ಜಾರ್ಜ್ ಅವರ ನಿವಾಸದಲ್ಲಿ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ದೆಹಲಿಯಿಂದ ಬೆಂಗಳೂರಿಗೆ ಬಂದ ಕೆಲವೇ ಸಮಯದಲ್ಲಿ ಜಾರ್ಜ್ ಮನೆಗೆ ಮುಖ್ಯಮಂತ್ರಿ ತೆರಳಿದ್ದಾರೆ. ಈ ವೇಳೆ ವಸತಿ ಸಚಿವ ಜಮೀರ್ ಅಹ್ಮದ್ ಕೂಡಾ ಇದ್ದರು.
ಸಚಿವರ ಮೌಲ್ಯಮಾಪನ:
ಕಾಂಗ್ರೆಸ್ ಹೈಕಮಾಂಡ್ ನಾಯಕರು ಇದೇ 4ರಂದು ರಾಜ್ಯದ ಸಚಿವರ ಕಾರ್ಯವೈಖರಿಯ ಮೌಲ್ಯಮಾಪನ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರ ಮೌಲ್ಯಮಾಪನಕ್ಕೆ ವರಿಷ್ಠರು ಮುಂದಾಗಿದ್ದಾರೆ ಎನ್ನಲಾಗಿದೆ.
ಶನಿವಾರ (ಆಗಸ್ಟ್ 3) ಸಂಜೆ ನಗರಕ್ಕೆ ಬರಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮರುದಿನ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ.
ಸರ್ಕಾರಕ್ಕೆ ವರ್ಷ ತುಂಬುತ್ತಿದ್ದಂತೆ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಕಳಂಕದಿಂದ ಪಕ್ಷ ಮುಜುಗರ ಅನುಭವಿಸುವಂತಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಸಚಿವರು ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ವರಿಷ್ಠರು ಸಲಹೆ, ಸೂಚನೆಗಳನ್ನು ನೀಡುವ ಜೊತೆಗೆ ಎಚ್ಚರಿಕೆ ಮಾತುಗಳನ್ನು ಹೇಳಲಿದ್ದಾರೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.