ADVERTISEMENT

ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಮೇ 2024, 8:48 IST
Last Updated 4 ಮೇ 2024, 8:48 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ‌ ಜರುಗಿಸುವಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಅವರು ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು.

ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ADVERTISEMENT

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ತಿಳಿಸಿದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.