ಬೆಂಗಳೂರು: ಒಳಮೀಸಲಾತಿ ನೀಡುವ ಸಂಬಂಧ ಸರ್ಕಾರ ರಚಿಸಲಿರುವ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯ ಆಯೋಗಕ್ಕೆ ಮೂರು ತಿಂಗಳಲ್ಲೇ ವರದಿ ನೀಡುವಂತೆ ಷರತ್ತು ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಒಳಮೀಸಲಾತಿ ನೀಡುವುದನ್ನು ತಡ ಮಾಡುವ ಅಥವಾ ಕಾಲ ಹರಣ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಆಯೋಗವು ನಿಗದಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರವು ತೆಗೆದುಕೊಳ್ಳಲಿದೆ. ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿ ಜಾರಿ ಮಾಡುವ ಉದ್ದೇಶದಿಂದಲೇ ಸರ್ಕಾರ ಆಯೋಗ ರಚಿಸುವ ತೀರ್ಮಾನ ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಒಳಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ– ಅಂಶಗಳ ಅಗತ್ಯವಿದೆ. ಈ ಅಂಕಿ–ಅಂಶಗಳನ್ನು ಆಯೋಗ ವೈಜ್ಞಾನಿಕವಾಗಿ ನಿರ್ಧರಿಸಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ಒಳಮೀಸಲಾತಿ ಕುರಿತು ಮೂರು ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ತೆಲಂಗಾಣ ಸರ್ಕಾರ ಸಹ ಒಳ ಮೀಸಲಾತಿ ಜಾರಿ ಸಂಬಂಧ ಈಗಾಗಲೇ ಇದೇ ಮಾದರಿಯಲ್ಲಿ ಒಂದು ಆಯೋಗ ರಚನೆ ಮಾಡಿದೆ ಎಂದಿದ್ದಾರೆ.
ಮುಂದಿನ ತೀರ್ಮಾನ ಆಗುವವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳಿಗೆ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸದಿರುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.