ADVERTISEMENT

ಕೊಲೆ ಪ್ರಕರಣ ಲವ್‌ ಜಿಹಾದ್‌ ಅಲ್ಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2024, 15:10 IST
Last Updated 20 ಏಪ್ರಿಲ್ 2024, 15:10 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಮೈಸೂರು: ‘ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಲವ್ ಜಿಹಾದ್ ಅಲ್ಲ. ಆ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಆರೋಪಿಯನ್ನು ಕೂಡಲೇ ಬಂಧಿಸಿದ್ದೇವೆ. ಗಂಭೀರವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಲ್ಲ ಸರ್ಕಾರಗಳ ಕಾಲದಲ್ಲೂ ಕೊಲೆಗಳು ನಡೆದಿವೆ. ರಾಜ್ಯದಲ್ಲಿ ಕಾನೂನು–ಸುವ್ಯವಸ್ಥೆ ಕಾಪಾಡುವುದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಿಗಿಂತ ನಮ್ಮಲ್ಲಿ ಶಾಂತಿ–ಸುವ್ಯವಸ್ಥೆ ಚೆನ್ನಾಗಿದೆ. ಯಾವುದೇ ಕುಕೃತ್ಯ ನಡೆದರೂ ನಾವು ಖಂಡಿಸುತ್ತೇವೆ. ಆದರೆ, ಬಿಜೆಪಿ–ಜೆಡಿಎಸ್‌ನವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಖಂಡನೀಯ. ಇಂಥ ಪ್ರಕರಣಗಳಿಂದ ನಮಗೆ ಯಾವುದೇ ವ್ಯತಿರಿಕ್ತ ಪರಿಣಾಮ ಆಗುವುದಿಲ್ಲ’ ಎಂದರು.

ADVERTISEMENT

ಒಂದು ಸಮಾಜದ ಓಲೈಕೆ: ಎಚ್‌ಡಿಕೆ

ಮೈಸೂರು: ‘ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಸಮರ್ಪಕ ಮಾಹಿತಿ ಪಡೆಯದೇ, ಒಂದು ಸಮಾಜದ ಓಲೈಕೆಗಾಗಿ ಏಕಾಏಕಿ ಹೇಳಿಕೆ ನೀಡಿದ್ದಾರೆ. ಈ ಸರ್ಕಾರ ಒಂದು ಸಮಾಜದ ರಕ್ಷಣೆ ಮಾಡಲಷ್ಟೇ ಇದೆಯೇ’ ಎಂದು ಮಂಡ್ಯ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿಎಂ ಹಾಗೂ ಡಿಸಿಎಂ ಹೆಣ್ಣು ಮಕ್ಕಳಿಗೆ ಎಷ್ಟು ಗೌರವ ಕೊಡುತ್ತಾರೆನ್ನುವುದು ಅವರ ಹೇಳಿಕೆಯಿಂದ ಕಂಡುಬಂದಿದೆ. ಕಾಂಗ್ರೆಸ್‌ ಪಾಲಿಕೆ ಸದಸ್ಯನ ಕುಟುಂಬಕ್ಕೆ ರಕ್ಷಣೆ ಕೊಡಲಾಗದ ಸರ್ಕಾರ ಇಡೀ ರಾಜ್ಯಕ್ಕೆ ರಕ್ಷಣೆ ಕೊಡುತ್ತದೆಯೇ? ಈ ಸರ್ಕಾರ ಪಾಕಿಸ್ತಾನ್‌ ಜಿಂದಾಬಾದ್ ಎಂದು ಕೂಗಿದವರ ಸಂತತಿಯನ್ನು ಬೆಳೆಸುತ್ತಿದೆ. ರಾಜ್ಯದಲ್ಲಿ ಕಾನೂನು– ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.