ADVERTISEMENT

ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2024, 23:30 IST
Last Updated 18 ಮಾರ್ಚ್ 2024, 23:30 IST
ಸಿದ್ದರಾಮಯ್ಯ, ಮೋದಿ
ಸಿದ್ದರಾಮಯ್ಯ, ಮೋದಿ   

ಬೆಂಗಳೂರು: ‘ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರೈತರು ಬಿಜೆಪಿಯನ್ನು ಯಾಕೆ ಬೆಂಬಲಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿವಮೊಗ್ಗದಲ್ಲಿ ಮೋದಿ ಸೋಮವಾರ ಚುನಾವಣಾ ಪ್ರಚಾರ ಕೈಗೊಂಡ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ‘ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ’ ಎಂದು ಕೆಣಕಿದ್ದಾರೆ.

‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು 2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಯಡಿಯೂರಪ್ಪ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸಿಲ್ಲ. ಹೀಗೆ ದ್ರೋಹ ಬಗೆದವರನ್ನು ರೈತರು ಯಾಕೆ ಬೆಂಬಲಿಸಬೇಕು’ ಎಂದು ಕೇಳಿದ್ದಾರೆ.

ADVERTISEMENT

‘ರಾಜ್ಯದಲ್ಲಿ ತೀವ್ರ ಬರ ಇದ್ದರೂ ಪರಿಹಾರದ ಹಣ ನಯಾಪೈಸೆ ಬಿಡುಗಡೆ ಆಗಿಲ್ಲ. ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 150ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ರಾಜ್ಯಕ್ಕೆ ತಲುಪಿಲ್ಲ. ಮಹದಾಯಿ, ಮೇಕೆದಾಟು ಯೋಜನೆ ಕೇಂದ್ರದ ಅನುಮತಿ ಸಿಗದೆ ನನೆಗುದಿಗೆ ಬಿದ್ದಿದೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟ ಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ರೈತರನ್ನು ಕೈಬಿಟ್ಟಿತ್ತು. ರೈತರಿಗೆ ನ್ಯಾಯ ಕೊಡಿಸಬೇಕಾದವರು ನೀವೇ ಅಲ್ಲವೇ’ ಎಂದೂ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.