ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳನ್ನು ಮುಂದಿಟ್ಟು ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಮುಂದಾಗಿರುವ ಮಧ್ಯೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಮಂಗಳವಾರ (ಜುಲೈ 29) ತೆರಳುತ್ತಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಮಂಗಳವಾರ ಸಂಜೆ 4 ಗಂಟೆಗೆ ಎಐಸಿಸಿ ನಾಯಕರ ಜೊತೆ ಸಭೆ ನಿಗದಿಯಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ರಾಜ್ಯದಲ್ಲಿ ಬಾಕಿ ಉಳಿದಿರುವ ಯೋಜನೆಗಳ ಬಗ್ಗೆ ಕೇಂದ್ರದ ನಾಯಕರ ಜೊತೆ ಚರ್ಚಿಸುವ ಉದ್ದೇಶದಿಂದ ಇಬ್ಬರು ನಾಯಕರು ದೆಹಲಿಗೆ ತೆರಳುತ್ತಿದ್ದಾರೆಯೇ ಹೊರತು, ಹಗರಣ ಅಥವಾ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿ ಅಲ್ಲ. ಈ ಭೇಟಿ ಪೂರ್ವಯೋಜಿತ. ಕೇಂದ್ರದ ಜಲಶಕ್ತಿ ಸಚಿವರೂ ಸೇರಿದಂತೆ ಕೆಲವು ಸಚಿವರನ್ನೂ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಇದೇ ವೇಳೆ ಉಭಯ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಹಗರಣಗಳಿಂದ ಉಂಟಾಗಿರುವ ರಾಜಕೀಯ ಪರಿಸ್ಥಿತಿಯ ಬಗ್ಗೆಯೂ ಮಾಹಿತಿ ನೀಡುವ ಸಾಧ್ಯತೆಯಿದೆ. ಇವರಿಬ್ಬರ ಜತೆ ಇನ್ನೂ ಕೆಲವು ಸಚಿವರು ದೆಹಲಿಗೆ ಹೋಗಲಿದ್ದಾರೆ’ ಎಂದೂ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.