ADVERTISEMENT

ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ: 40 ಮಂದಿ ವಶಕ್ಕೆ, ಏ. 20ರವರೆಗೆ ನಿಷೇಧಾಜ್ಞೆ

ನಗರದಾದ್ಯಂತ ಪೊಲೀಸ್ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 7:00 IST
Last Updated 17 ಏಪ್ರಿಲ್ 2022, 7:00 IST
   

ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ವೃತ್ತದಲ್ಲಿ ಶನಿವಾರ ನಡೆದ ಕಲ್ಲು ತೂರಾಟ ಹಾಗೂ ದಾಂದಲೆ ನಡೆಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಇದುವರೆಗೆ ಆರು ಪ್ರಕರಣಗಳನ್ನು ದಾಖಲಿಸಿ 40 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಯುವಕನೊಬ್ಬ ಮಸೀದಿ ಮೇಲೆ ಭಗವಾಧ್ವಜ ಹಾರಿಸುವ ಚಿತ್ರವನ್ನು ವಾಟ್ಸ್ ಆ್ಯಪ್ ಸ್ಟೇಟಸ್ ಆಗಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ, ಇಂಡಿ ಪಂಪ್ ವೃತ್ತದಲ್ಲಿ ಮುಸ್ಲಿಂ ಸಮುದಾಯದವರು ಜಮಾಯಿಸಿದ್ದರು. ಕೆಲವರು ನಂತರ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದರು. ಘಟನೆ ಕಾರಣನಾದ ಯುವಕ ಅಭಿಷೇಕ ಹಿರೇಮಠನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

12 ಮಂದಿಗೆ ಗಾಯ: ಘಟನೆಯಲ್ಲಿ ಸಂಚಾರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕಾಡದೇವರ ಮಠ, ಹೆಡ್ ಕಾನ್ಸ್‌ಟೇಬಲ್ ಸೇರಿದಂತೆ, ಒಟ್ಟು 12 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಕೆಲವರು ಆಸ್ಪತ್ರೆಗೆ ದಾಖಲಾಗಿದ್ದರೆ, ಉಳಿದವರು ಪ್ರಾಥಮಿಕ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ ಎಂದು ಪೊಲೀಸ್ ಕಮಿಷನರ್ ಲಾಭೂ ರಾಮ್ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ದಾಂದಲೆಯಲ್ಲಿ ಪೊಲೀಸ್ ವಾಹನಗಳು ಸೇರಿದಂತೆ ಒಟ್ಟು 12 ವಾಹನಗಳು ಜಖಂಗೊಂಡಿವೆ. ಘಟನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರ ವಾಹನಗಳಿಗೆ ಹಾನಿಯಾಗಿದ್ದರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಕಟ್ಟೆಚ್ಚರ: ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ರಾತ್ರಿ 11 ಗಂಟೆಯಿಂದ ಏ.‌ 20 ರವರೆಗೆ ನಿಷೇದಾಜ್ಞೆ ವಿಧಿಸಲಾಗಿದೆ. ಚನ್ನಮ್ಮ ವೃತ್ತ, ಘಟನೆ ನಡೆದ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ವಿವಿಧೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.